ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ- ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ 7ನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ಇದುವರೆಗೆ 7 ಮಂದಿಯ ಶವ ಪತ್ತೆಯಾಗಿದೆ. ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇಂದು ಕಾರ್ಯಾಚರಣೆಗೆ ಸೇನಾ ಪಡೆ ಸಾಥ್ ನೀಡುತ್ತಿದೆ. ಹೀಗಾಗಿ ರಕ್ಷಣಾ ಕಾರ್ಯ ಇನ್ನಷ್ಟು ವೇಗದಿಂದ ಸಾಗಲಿದೆ.

44 ಮಂದಿಯಿರುವ ಸೇನಾ ತುಕಡಿಯನ್ನು ಕೇಂದ್ರ ನಿಯೋಜಿಸಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿರುವ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌, ನೌಕಾಪಡೆ, ಅಗ್ನಿಶಾಮಕ ದಳ, ಪೊಲೀಸರು ತೊಡಗಿಸಿಕೊಂಡಿದ್ದಾರೆ. ಪ್ರತಿಕೂಲ ಹವಾಮಾನ ಶೋಧ ಕಾರ್ಯಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂದು ನದಿಯಲ್ಲಿ ನಿರ್ಮಾಣವಾಗಿರುವ ಮಣ್ಣಿನ ದ್ವೀಪಗಳಲ್ಲಿ ಶೋಧ ನಡೆಸಲು ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.