ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಭರ್ಜರಿ ಮಳೆಯಾಗಿದ್ದು, ಇಂದೂ (ಭಾನುವಾರ) ಕೂಡ ಮುಂದುವರೆಯುವ ಸಾಧ್ಯತೆ ಇದೆ.
ಇನ್ನು ರಾಜ್ಯದ ಇತರ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಯಾದಗಿರಿ ಕಲಬುರಗಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮುಂದಿನ ಒಂದು ವಾರದ ಕಾಲ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವೆಡೆಯೂ ಹಗುರ ಮಳೆಯಾಗಬಹುದು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಸುರಿಯಲಿದೆ. ಇಂದು (ಭಾನುವಾರ) ಕಲಬುರ್ಗಿ, ರಾಯಚೂರು, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬಳ್ಳಾರಿ ಜಿಲ್ಲೆಯಲ್ಲೂ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.