ಮಡಿಕೇರಿ: ಚಲಿಸುತ್ತಿದ್ದ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ನಾಲ್ಕು ವರ್ಷದ ಮಗಳು ಲಿಯ ಎಂದು ಗುರುತಿಸಲಾಗಿದೆ.

ಸೋಮವಾರ (ಅ.21) ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮದ ತಮ್ಮ ಮನೆಗೆ ಸ್ಯಾಂಟ್ರೋ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಪರಿಣಾಮ ಕಾರಿನೊಳಗೆ ಸಿಲುಕಿದ ಮೂವರು ನೀರಿನೊಳಗೆ ಮುಳುಗಿ ಮೃತಪಟ್ಟಿದ್ದಾರೆ. ಬೆಳಗ್ಗೆ ತೋಟದ ಕಾರ್ಮಿಕರು ಕಾರನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಕಾರಿನೊಳಗಿದ್ದ ಮೂವರು ಮೃತಪಟ್ಟಿರುವುದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಪೊಲೀಸತು ಕೆರೆಗೆ ಕಾರು ಉರುಳಲು ನಿಖರ ಕಾರಣದ ಬಗ್ಗೆ ತನಿಖೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಡಗ ಬಾಣಂಗಾಲ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.