ಮಡಿಕೇರಿ: ರಾಜ್ಯದ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಭೂಕುಸಿತ, ಮರ ಉರುಳುವಂತಹ ಘಟನೆಗಳು ಹೆಚ್ಚಾಗಿವೆ. ಮುಂಜಾಗ್ರತಾ ಕ್ರಮವಾಗಿ ಕೊಡಗಿನ ಪ್ರಮುಖ ಪ್ರವಾಸಿ ತಾಣವಾದ ರಾಜಾಸೀಟ್‌ಗೆ ಜುಲೈ 10ರಿಂದ 12ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಕಳೆದ ಐದು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ತಲಕಾವೇರಿ ಹಾಗೂ ಭಾಗಮಂಡಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದೆ.
ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಅಲ್ಪ ಪ್ರಮಾಣದ ಭೂಕುಸಿತದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ತಾತ್ಕಾಲಿಕ ಸಂಚಾರ ವ್ಯವಸ್ಥೆಯಿಂದ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಹಾಗೂ ರಾಜಾಸೀಟ್ ಬಳಿ ವಾಹನ ನಿಲುಗಡೆ ಸಮಸ್ಯೆ ಉಂಟಾಗುವ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

