ಮಡಿಕೇರಿ: ವಸತಿ ಶಾಲೆಯ ನಿರ್ವಹಣೆಯಲ್ಲಿ ಕರ್ತವ್ಯಲೋಪ ಎಸಗಿದದ ಕಾರಣ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಅವರು ಖಡಕ್ ಸೂಚನೆಯ ಮೇರೆಗೆ ವಿರಾಜಪೇಟೆ ಅರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಮತಾ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಎರಡು ತಿಂಗಳ ಹಿಂದೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಂಧರ್ಭದಲ್ಲಿ, ಅಡುಗೆ ಕೋಣೆಯಲ್ಲಿ ನೊಣಗಳು, ಶಾಲೆ ಕಿಟಕಿಗಳು ಪಾಳು ಬಿದ್ದಿರುವುದು, ಶೌಚಾಲಯದಲ್ಲಿ ಶುಚಿತ್ವ ಕಾಪಾಡದೇ ಇರುವುದು, ವಿದ್ಯಾರ್ಥಿಗಳು ಬಳಸುವ ಹಾಸಿಗೆಗಳು ಯೋಗ್ಯವಾಗಿಲ್ಲದಿದ್ದರೂ ಶಾಲೆಯಲ್ಲಿರುವ ಹೊಸ ಹಾಸಿಗೆಯನ್ನು ವಿತರಣೆ ಮಾಡದೇ ಇರುವುದು, ದಾಸ್ತಾನು, ವಿತರಣೆ ವಹಿ ನಿರ್ವಹಣೆ ಮಾಡದೇ ಇರುವುದರ ಮೂಲಕ ಲಕ್ಷಾಂತರ ರೂಪಾಯಿಗಳ ಹಣ ಪೋಲಾಗುವಂತೆ ಮಾಡಿದ್ದು ಕಂಡುಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಮೇಲಾಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಯಾವುದೇ ಕ್ರಮವನ್ನು ಕೈಗೊಳ್ಳದೇ ಇರುವ ಬಗ್ಗೆ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಕೋಪಗೊಂಡರು. ಸಭೆಯ ಮಧ್ಯೆಯೇ, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಿಗೆ ದೂರವಾಣಿ ಮೂಲಕ ಖಡಕ್ ಸೂಚನೆ ನೀಡಿದ ಅವರು ಸಂಜೆಯೊಳಗಾಗಿ ಅಮಾನತ್ತು ಆದೇಶ ಸಲ್ಲಿಸುವಂತೆ ಸೂಚಿಸಿದ್ದರು. ಇದರ ಹಿನ್ನಲೆಯಲ್ಲಿ ವಿರಾಜಪೇಟೆ ಅರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಮತಾ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸರಕಾರದ ಸೌಲಭ್ಯಗಳನ್ನು ಸರಿಯಾಗಿ ಫಲಾನುಭವಿಗಳಿಗೆ ತಲುಪಿಸುವುದು, ಅದರ ನಿರ್ವಹಣೆ ಮಾಡುವುದು ಸರಕಾರಿ ಅಧಿಕಾರಿಗಳ ಕರ್ತವ್ಯವಾಗಿದೆ. ಕರ್ತವ್ಯ ಲೋಪವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಉತ್ತಮ ಸೇವೆಯನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.

