ಧರ್ಮಸ್ಥಳ: ವಿಶೇಷ ತನಿಖಾ ದಳದ ತನಿಖೆಯ ಹೆಸರಿನಲ್ಲಿ ನಡೆಯುತ್ತಿರುವ ಧರ್ಮಸ್ಥಳದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಭಾನುವಾರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್‌ಐಟಿ ತನಿಖೆಗೆ ಬಿಜೆಪಿ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ, ಆದರೆ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಪಿತೂರಿಯನ್ನು ಖಂಡಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇಂತಹ ಶಕ್ತಿಗಳು ಕೆಲಸ ಮಾಡುತ್ತಿದ್ದರೆ, ಸರ್ಕಾರ ಯಾಕೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ?” ಎಂದು ಪ್ರಶ್ನಿಸಿದರು.
ಹಿರಿಯ ಬಿಜೆಪಿ ನಾಯಕರಾದ ಸಿ ಟಿ ರವಿ, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಮತ್ತು ಭರತ್ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಭಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್, ಯಶ್‌ಪಾಲ್ ಸುವರ್ಣ ಮತ್ತಿತರರು ಅವರೊಂದಿಗೆ ಇದ್ದರು. ಬಳಿಕ ಅವರೆಲ್ಲರೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

