ಮಂಗಳೂರು : ರಾಜ್ಯ ಸರಕಾರದ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ದಕ್ಷಿಣ ಕನ್ನಡ ಮೂಲದ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರನ್ನು ಮಂಗಳೂರು ಪತ್ರಿಕಾ ಭವನದಲ್ಲಿ ಅಭಿನಂದಿಸಿ ಗೌರವಿಸಲಾಯಿತು.
ವಿಶ್ವನಾಥ ಸುವರ್ಣ ಅವರು ಮಂಗಳೂರು ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಈ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿಶ್ವನಾಥ ಸುವರ್ಣ ಅವರು, ಕಳೆದ 45 ವರ್ಷಗಳ ತಮ್ಮ ಪತ್ರಿಕಾ ಛಾಯಾಗ್ರಹಣ ವೃತ್ತಿಜೀವನದ ಸಿಹಿ-ಕಹಿ ಅನುಭವಗಳನ್ನು ಹಂಚಿಕೊಂಡರು. ಈ ಸುದೀರ್ಘ ಪಯಣದಲ್ಲಿ ಬೆಂಬಲ ನೀಡಿದ ಎಲ್ಲರನ್ನೂ ಸ್ಮರಿಸಿ ಕೃತಜ್ಞತೆ ಸಲ್ಲಿಸಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೂ ಧನ್ಯವಾದ ಅರ್ಪಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಅವರು ವಿಶ್ವನಾಥ ಸುವರ್ಣ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.
ಜಿಲ್ಲಾ ಸಂಘದ ಪೂರ್ವಾಧ್ಯಕ್ಷ ಹರ್ಷ, ಸಂಘದ ಕಾರ್ಯದರ್ಶಿ ಸತೀಶ್ ಇರಾ, ಕಾರ್ಯಕಾರಿ ಸಮಿತಿ ಸದಸ್ಯರಾದ ಸಂದೇಶ್ ಜಾರ, ಹರೀಶ್ ಮೋಟುಕಾನ ಮೊದಲಾದವರು ಉಪಸ್ಥಿತರಿದ್ದರು.

