ಮಂಗಳೂರು: ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 50 ವರ್ಷಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಜುಲೈ ೫ ರ ಇಂದು ಹೃದಯಾಘಾತದಿಂದ ನಿಧನರಾದರು.
ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಿದ್ದರು. ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರನಾಗಿ 1948ರಲ್ಲಿ ಜನಿಸಿದ ಶ್ರೀಧರ ರಾವ್, ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಒಟ್ಟು 60 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

