ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಹಾಗೂ ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್‌ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಆರ್‌ಪಿಎಲ್‌ನಂತಹ ಬೃಹತ್ ಕೈಗಾರಿಕಾ ಘಟಕಗಳಲ್ಲಿ ಕಾರ್ಮಿಕರು ಹಾಗೂ ಸುತ್ತಮುತ್ತಲಿನ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಸ್ಥೆಯಲ್ಲಿ ನಡೆದ ಅವಘಡಗಳ ಕುರಿತು ಸಮಗ್ರ ತನಿಖೆ ನಡೆಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದರು.

ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಅವರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ನೀಡಿರುವುದನ್ನು ಸ್ವಾಗತಿಸಿದ ಅವರು, ಕುಟುಂಬಕ್ಕೆ ಅಗತ್ಯ ನೆರವು ಹಾಗೂ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿದರು.

ಎಂಆರ್‌ಪಿಎಲ್‌ನ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಕನಿಷ್ಠ ₹10 ಲಕ್ಷದ ಆರೋಗ್ಯ ವಿಮೆ ಮತ್ತು ಅಪಘಾತದಲ್ಲಿ ಮೃತಪಟ್ಟ ಸಂದರ್ಭದಲ್ಲಿ ₹25 ಲಕ್ಷ ವಿಮಾ ಸೌಲಭ್ಯ ಕಲ್ಪಿಸಬೇಕು. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವ ಕಾರ್ಮಿಕರನ್ನು ಉದ್ಯೋಗದಿಂದ ವಜಾಗೊಳಿಸುವ ಆರೋಪಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಅನಿಲ ಸೋರಿಕೆ ಸೇರಿದಂತೆ ಅಪಾಯಕಾರಿ ಪರಿಸ್ಥಿತಿಗಳನ್ನು ತಕ್ಷಣ ಪತ್ತೆಹಚ್ಚುವ ಡಿಟೆಕ್ಷನ್ ವ್ಯವಸ್ಥೆ, ಎಚ್ಚರಿಕೆ ಸೈರನ್ ಹಾಗೂ ತುರ್ತು ಸ್ಥಳಾಂತರ ವ್ಯವಸ್ಥೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸುರಕ್ಷತಾ ವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದರು.

ಎಂಆರ್‌ಪಿಎಲ್ ಅವಘಡವನ್ನು ಕೇವಲ ಕಾರ್ಮಿಕರ ಸಮಸ್ಯೆಯಾಗಿ ನೋಡದೆ, ಜಿಲ್ಲೆಯ ಹಿತಾಸಕ್ತಿಯ ವಿಚಾರವಾಗಿ ಪರಿಗಣಿಸಿ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಹೋರಾಟ ರೂಪಿಸಲಾಗುವುದು ಎಂದು ಸತ್ಯಜಿತ್ ಸುರತ್ಕಲ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎತ್ತಿನಹೊಳೆ ಹೋರಾಟ ಸಮಿತಿ ಸಂಚಾಲಕ ಶಶಿರಾಜ್ ಶೆಟ್ಟಿ ಕೊಳಂಬೆ, ಕೆಪಿಟಿಎಂಎಸ್ ಜಿಲ್ಲಾಧ್ಯಕ್ಷ ಯಶ್‌ಪಾಲ್ ಸುವರ್ಣ, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ತುಷಾರ್ ಕದ್ರಿ, ತುಳುನಾಡು ರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ , ಪ್ರಮುಖರಾದ ಅಮರ್ ಉಪಸ್ಥಿತರಿದ್ದರು.