ಮಂಗಳೂರು: ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆದಿತ್ಯವಾರದಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿದ್ದಾರೆ.

ಹೈದರ್ @ ಹೈದರ್ ಆಲಿ, ಮೊಹಮ್ಮದ್ ಸಜಾದ್ (29) ಜೈಸನ್ ಮೆನೆಜಸ್ (26) ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ ರೂ.2,50,000/- ಮೌಲ್ಯದ 26 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ನಗದು ಹಣ – 37,000/- ಮೊಬೈಲ್ ಫೋನ್-5, ತೂಕಮಾಪನ, KA-19-AC-2245ನೇ ನಂಬ್ರದ ಆಟೋ ರಿಕ್ಷಾ, ಸಹಿತ ಒಟ್ಟು ರೂ. 4,37,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಹೈದರ್ @ ಹೈದರ್ ಆಲಿ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರರಣ ಹಾಗೂ 2024ನೇ ವರ್ಷದಲ್ಲಿ ಮಾದಕವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿದ್ದು, ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.