ಮಂಗಳೂರು: ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರು ವಕೀಲರ ಪರಿಷತ್ ಹಾಗೂ ವಕೀಲರ ಸಂಘದ ನಿರ್ಣಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಅದರಂತೆ ಮಂಗಳೂರಿನಲ್ಲೂ ವಕೀಲರು ಕೋರ್ಟ್ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಇತ್ತೀಚೆಗೆ ಮಂಜುನಾಥ್ ಎಂಬ ಯುವ ವಕೀಲರನ್ನು ಅವರ ಮನೆಯೊಳಗೇ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ಶ್ರೀರಾಮ್ ಎಂಬ ವಕೀಲರ ಕೊಲೆ ನಡೆದಿದ್ದು, ವೆಂಕಟರಮಣ ಎಂಬ ವಕೀಲರ ಮೇಲೂ ಕೊಲೆ ಯತ್ನ ನಡೆದಿತ್ತು.
ರಾಜ್ಯದಲ್ಲಿ ವಕೀಲರ ಮೇಲೆ ಇಂತಹ ಹಲ್ಲೆ ಹಾಗೂ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಕೀಲರಿಗೆ ಸೂಕ್ತ ಭದ್ರತೆ ಒದಗಿಸಬೇಕು ಹಾಗೂ ವಕೀಲರ ರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

