ಮಂಗಳೂರು: “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಧೈಯದೊಂದಿಗೆ ನವೆಂಬರ್ 16ರಂದು ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಎನ್ಸಿಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು.
ಮಂಗಳೂರಿನ ಎಸ್ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, “ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯವನ್ನು ಇರಿಸಿಕೊಂಡು ಹಲವಾರು ಯೋಜನೆಗಳನ್ನು ರೂಪಿಸಿದರು. ಇದು ಸಹಕಾರ ಚಳುವಳಿಯ ಬೆಳವಣಿಗೆಗೆ ಸಹಕಾರಿಯಾಯಿತು.
ಇದರ ಫಲವಾಗಿ ರಾಷ್ಟ್ರದ ಸಹಕಾರ ಚಳುವಳಿಗೆ 121 ವರ್ಷಗಳ ಭವ್ಯ ಇತಿಹಾಸವಿದೆ. ವಿಶ್ವದಲ್ಲಿ ಅತ್ಯುತ್ತಮ ಸಹಕಾರ ಚಳುವಳಿಯನ್ನು ನಮ್ಮ ರಾಷ್ಟ್ರ ಹೊಂದಿರುತ್ತದೆ. ಸಮಾಜದ ಎಲ್ಲಾ ವರ್ಗದ ಆರ್ಥಿಕ ಬೆಳವಣಿಗೆಗೆ ಸಹಕಾರಿ ಕ್ಷೇತ್ರವೇ ಭದ್ರ ಬುನಾದಿಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ನವೆಂಬರ್ 14ರಿಂದ 20 “ರವರೆಗೆ ರಾಷ್ಟ್ರದಾದ್ಯಂತ “ಅಖಿಲ ಭಾರತ ಸಹಕಾರ ಸಪ್ತಾಹ” ನಡೆಯುತ್ತದೆ. ಪಂಡಿತ್ ನೆಹರೂರವರ ಜನ್ಮದಿನವಾದ ನವೆಂಬರ್ 14ರಂದು ಸಪ್ತಾಹದ ಉದ್ಘಾಟನೆ ನಡೆಸಲಾಗುತ್ತದೆ” ಎಂದು ಹೇಳಿದರು.
“ಸಪ್ತಾಹದ ಅವಧಿಯಲ್ಲಿ ಸಹಕಾರ ಚಳುವಳಿ ನಡೆದು ಬಂದ ಹಾದಿಯ ಅವಲೋಕನ ನಡೆಸಿ ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಬಗ್ಗೆ ಚಿಂತನೆ ನಡೆಸುವುದೇ ಸಹಕಾರಿ ಸಪ್ತಾಹದ ಮುಖ್ಯ ಉದ್ದೇಶವಾಗಿರುತ್ತದೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದ ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ನಮ್ಮ ಉಭಯ ಜಿಲ್ಲೆಗಳಲ್ಲೂ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ನಡೆಸಲು ನಿರ್ಧರಿಸಲಾಗಿದೆ” ಎಂದು ಹೇಳಿದರು.
ನವೆಂಬರ್ 16ರಂದು “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಎಂಬ ವಿಷಯದೊಂದಿಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,
ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ.. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ., ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ, ವಿವಿಧ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ನುಡಿದರು.

