ವಿಟ್ಲ: ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಅಪಘಾತ ಸಂಭವಿಸಿದೆ.

ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.