ಉಳ್ಳಾಲ : ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡಿದ್ದ ವರ್ಷಿತ್ ಕುತ್ತಾರ್ ಅವರ ಮೆದುಳು ನಿಷ್ಕ್ರಿಯೆ ಗೊಂಡು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೆದುಳು ನಿಷ್ಕ್ರಿಯೆಗೊಂಡ ಯುವಕನ ಕುಟುಂಬ ಮಗನ ಅಂಗಾಂಗ ದಾನ ಮಾಡುವ ಮೂಲಕ ಸಾವಿನ ದುಃಖದಲ್ಲೂ ಮಾನವೀಯತೆ ಮೆರೆದಿದ್ದಾರೆ

ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ ಗೋಪಾಲ ಮತ್ತು ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯಗೊಂಡ ಯುವಕ ಇವರು ಫ್ಯಾಬ್ರಿಕೇಶನ್ ವೃತ್ತಿ ಮಾಡುತ್ತಿದ್ದರು.

ವರ್ಷಿತ್ ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಕುತ್ತಾರುವಿನಿಂದ ತನ್ನ ಮನೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಬೈಕ್‌ನಿಂದ ರಸ್ತೆಗೆಸೆಯಲ್ಪಟ್ಟ ವರ್ಷಿತ್ ಅವರ ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ತಿಳಿಸಿದ ನಂತರ ವರ್ಷಿತ್ ಅವರ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ.

ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಮೂತ್ರಪಿಂಡ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಗಳಿಗೆ ಬೇಡಿಕೆ ಬಂದಿದ್ದು, ಇಂದು ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ಮೂಲಕ ಅಂಗಾಂಗಗಳನ್ನು ಸಂಬಂಧಪಟ್ಟ ಆಸ್ಪತ್ರೆಗಳಿಗೆ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.