ನಂಜನಗೂಡು: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ, ಬೆಂಗಳೂರು ಇವರ ನೇತೃತ್ವದಲ್ಲಿ ರಾಜ್ಯಮಟ್ಟದ ಎಸ್ಸಿ/ಎಸ್ಟಿ ನೌಕರರ 6ನೇ ಐಕ್ಯತಾ ಸಮಾವೇಶವನ್ನು ಆ. 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ನಂಜನಗೂಡು ತಾಲ್ಲೂಕು ಅಧ್ಯಕ್ಷ ಎನ್. ಹರೀಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ನಂಜನಗೂಡಿನಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಮಾವೇಶವನ್ನು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಜ್ಯದ ಹಲವು ಸಚಿವರು ಹಾಗೂ ಶಾಸಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾವೇಶದ ನೇತೃತ್ವವನ್ನು ರಾಜ್ಯಾಧ್ಯಕ್ಷ ರಾದ ಡಿ. ಶಿವಶಂಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯ್ ಕುಮಾರ್ ಸೇರಿದಂತೆ ರಾಜ್ಯ ಪದಾಧಿಕಾರಿಗಳು ವಹಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿರುವ ಎಲ್ಲಾ ಎಸ್ಸಿ/ಎಸ್ಟಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ನಂಜನಗೂಡು ತಾಲ್ಲೂಕು ಅಧ್ಯಕ್ಷ ಎನ್. ಹರೀಶ್ ಕುಮಾರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9902857847 ಕ್ಕೆ ಕರೆ ಮಾಡುವಂತೆ ಕೋರಿದ್ದಾರೆ.

