ನಂಜನಗೂಡು: ನಗರದ ಅಂಗಡಿ ಬೀದಿಯಲ್ಲಿರುವ ಪಾತ್ರೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ನಂಜನಗೂಡಿನ ಅಂಗಡಿ ಬೀದಿಯಲ್ಲಿರುವ ತಿಮ್ಮಯ್ಯ ಬಿಲ್ಡಿಂಗ್ ನಲ್ಲಿ ಅಶೋಕ್ ಎಂಬುವರಿಗೆ ಸೇರಿದ ಪಾತ್ರೆ ಅಂಗಡಿಯಾಗಿದ್ದು,
ಅಂಗಡಿಯೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆ ಅಂಗಡಿಯಲ್ಲಿದ್ದ ವಸ್ತುಗಳಿಗೆ ವ್ಯಾಪಿಸಿದೆ. ಪರಿಣಾಮ ಪಾತ್ರೆಗಳು, ವಿವಿಧ ಸಾಮಗ್ರಿಗಳು ಸೇರಿದಂತೆ ಅಂಗಡಿಯಲ್ಲಿದ್ದ ಹಲವು ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಿಂದ ಅಂಗಡಿ ಮಾಲೀಕರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಅಂಗಡಿಯಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಹರಡುವುದನ್ನು ತಡೆದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೇ ಎಂಬ ಶಂಕೆಯೂ ವ್ಯಕ್ತವಾಗಿದ್ದು, ತನಿಖೆಯ ಬಳಿಕವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ. ಬೆಂಕಿ ಅವಘಡದಿಂದ ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ನಷ್ಟದ ಪ್ರಮಾಣವನ್ನು ಅಂದಾಜಿಸಲಾಗುತ್ತಿದೆ.

