ಮೈಸೂರು: ಕೆ.ಆರ್. ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮತ್ತೊಂದು ಬಾಣಂತಿ ಸಾವಿನ ಪ್ರಕರಣ ಸಂಭವಿಸಿದ್ದು, ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ.ಆರ್. ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದ 31 ವರ್ಷದ ಶೀಲಾವತಿ ಅವರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಬಳಿಕ ತಾಯಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯಾಹ್ನ 1.30ರ ಸುಮಾರಿಗೆ ಶೀಲಾವತಿ ಮೃತಪಟ್ಟಿದ್ದಾರೆ. ನವಜಾತ ಶಿಶು ಸದ್ಯ ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವೇ ಶಿಲಾವತಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ತಾಯಿಯ ಮೃತದೇಹವನ್ನಿಟ್ಟು ಕೆ.ಆರ್. ನಗರ ಆಸ್ಪತ್ರೆಯ ಮುಂಭಾಗದಲ್ಲಿ ಸಂಬಂಧಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸಾವಿಗೆ ನಿಖರ ಕಾರಣ ತಿಳಿಸಬೇಕು, ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವವರು ಯಾರೇ ಆಗಿದ್ದರೂ ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಮತ್ತೆ ಮತ್ತೆ ಬಾಣಂತಿಯರ ಸಾವು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ತಾಯಿ ಮತ್ತು ಮಗುವಿನ ಸುರಕ್ಷತೆಗೆ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ಹಾಗೂ ಸೂಕ್ತ ಮೇಲ್ವಿಚಾರಣೆ ಇದೆಯೇ ಎಂಬ ಪ್ರಶ್ನೆ ಇದೀಗ ಎದ್ದಿದೆ.

