ಮೈಸೂರು: ನಂಜನಗೂಡು ತಾಲ್ಲೂಕಿನ ಬ್ಯಾಳಾರು ಗ್ರಾಮದ ದಲಿತರ ಬೀದಿಯಲ್ಲಿ ಕಬಿನಿ ನಾಲೆಯ ಸಣ್ಣ ಕಾಲುವೆ ಮೂಲಕ ರೈತರ ಗದ್ದೆಗಳಿಗೆ ನೀರು ಹರಿಯುವ ಹಳ್ಳವನ್ನೇ ಮುಚ್ಚಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಆರೋಪ ಕೇಳಿಬಂದಿದೆ.
ಈ ಸಣ್ಣ ಕಾಲುವೆ ನೀರನ್ನು ಬಳಸಿಕೊಂಡು ಸುಮಾರು 40 ಎಕರೆಗೂ ಹೆಚ್ಚು ಪ್ರದೇಶದಲ್ಲಿ ರೈತರು ಕೃಷಿ ಮಾಡುತ್ತಿದ್ದಾರೆ. ಪರ್ಯಾಯ ರಸ್ತೆ ಇದ್ದರೂ ಖಾಸಗಿ ವ್ಯಕ್ತಿಯೊಬ್ಬರು ಹಳ್ಳವನ್ನೇ ಒತ್ತುವರಿ ಮಾಡಿಕೊಂಡು ರಸ್ತೆ ನಿರ್ಮಿಸಲು ಮುಂದಾಗಿದ್ದಾರೆ. ಇದರಿಂದ ನೀರು ಮನೆಗಳ ಹಿಂಭಾಗಕ್ಕೆ ನುಗ್ಗಿ ನಿವಾಸಿಗಳಿಗೆ ತೊಂದರೆಯಾಗುತ್ತಿದೆ.
ಈ ಸಂಬಂಧ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ದೇಬೂರು ಗ್ರಾಮ ಪಂಚಾಯಿತಿಗೆ ಒಂದು ವರ್ಷದ ಹಿಂದೆಯೇ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. ಇನ್ನೊಂದೆಡೆ ಚರಂಡಿ ನೀರು ನಿಂತು ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.
ಕಾಲುವೆಯನ್ನು ಮುಚ್ಚಿ ರಸ್ತೆ ನಿರ್ಮಾಣವನ್ನು ತಡೆದಿದ್ದಕ್ಕೆ ಐವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಖಾಸಗಿ ವ್ಯಕ್ತಿಗಳ ಪರವಾಗಿ ವರ್ತಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಕೂಡಲೇ ಹಳ್ಳದ ಒತ್ತುವರಿ ತೆರವುಗೊಳಿಸಬೇಕು. ಕಾಲುವೆಯ ನೀರು ಮನೆಗಳಿಗೆ ನುಗ್ಗದಂತೆ ತಡೆದು ತಡೆಗೋಡೆ ನಿರ್ಮಾಣ ಮಾಡಬೇಕು.
ಗ್ರಾಮದಲ್ಲಿ ಚರಂಡಿ ಸ್ವಚ್ಛಗೊಳಿಸಿ ಸಮಸ್ಯೆ ಬಗೆಹರಿಸದಿದ್ದರೆ ದಲಿತ ಸಂಘರ್ಷ ಸಮಿತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ದಸಂಸ ತಾಲ್ಲೂಕು ಸಂಘಟನಾ ಸಂಚಾಲಕ ಆನಂದ್ ಎಚ್ಚರಿಕೆ ನೀಡಿದ್ದಾರೆ.

