ನಂಜನಗೂಡು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಬಿವೈ ವಿಜಯೇಂದ್ರ ರವರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ತಾಪಂ ಉಪಾಧ್ಯಕ್ಷ ಹಾಗೂ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿ ಸಿಎಂ ಮಹದೇವಯ್ಯ ಹೇಳಿದರು.
ನಂಜನಗೂಡು ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಬಿಜೆಪಿ ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿಯನ್ನಾಗಿ ನನ್ನನ್ನು ಆಯ್ಕೆ ಮಾಡಿ ನೇಮಕ ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಎಸ್ ಮಹದೇವಯ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ಕುಂಬರಹಳ್ಳಿ ಸುಬ್ಬಣ್ಣ ರವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಪಕ್ಷ ನನಗೆ ಜವಾಬ್ದಾರಿ ಕೊಟ್ಟಿದೆ. ಆ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸಲು ವರುಣ ವಿಧಾನಸಭಾ ಕ್ಷೇತ್ರದಿಂದ ಕಾರ್ಯದರ್ಶಿಗಳು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ವರುಣ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಿ ಪಕ್ಷ ಸಂಘಟನೆಗೆ ಪಣತೊಡುತ್ತೇನೆ.
ಮೈಸೂರು ಜಿಲ್ಲೆಯಲ್ಲಿ ಗ್ರಾಮಾಂತರ ಭಾಗಗಳಲ್ಲಿ ಬಿಜೆಪಿ ಪಕ್ಷದ ಶಾಸಕರು ಗೆದ್ದಿಲ್ಲ. ಮುಂಬರುವ 2028ರ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಮ್ಮ ಮೈಸೂರು ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 5 ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ. ಬಿವೈ ವಿಜಯೇಂದ್ರ ರವರು ನಮ್ಮ ಮುಂದಿನ ಸಿಎಂ ಆಗಲಿದ್ದಾರೆ ಎಂದು ನಂಜನಗೂಡಿನಲ್ಲಿ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿ ಸಿ.ಎಂ ಮಹದೇವಯ್ಯ ಭವಿಷ್ಯ ನುಡಿದರು.

