ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ಮೈದುಂಬಿ ಹರಿಯುತ್ತಿದ್ದು, ಸಾರ್ವಜನಿಕರು ಮತ್ತು ಭಕ್ತರು ಕಪಿಲಾ ನದಿ ಬಳಿ ತೆರಳದಂತೆ ನಿರ್ಬಂಧ ಹೇರಲಾಗಿದೆ ಎಂದು ತಹಶೀಲ್ದಾರ್ ಡಾ.ಸ್ಮಿತಾ ರಾಮು ಹೇಳಿದರು.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಮಾತನಾಡಿದ ಅವರು, ಕೇರಳದ ವೈನಾಡಿನಲ್ಲಿ ಹೆಚ್ಚಾದ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ಇದರಿಂದಾಗಿ ನಂಜನಗೂಡಿನ ಕಪಿಲಾ ನದಿ ಮೈದುಂಬಿ ಹರಿಯುತ್ತಿದೆ.
ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 11.217 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಈ ಜಲಾನಯನ ಪ್ರದೇಶದಲ್ಲಿ ಬಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಪ್ರಯುಕ್ತ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಕಬಿನಿ ಜಲಾಶಯದಿಂದ 10 ಸಾವಿರದಿಂದ 15 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು, ಹಾಗೂ ಯಾವುದೇ ಕ್ಷಣದಲ್ಲಾದರೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹರಿಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದರು.
ಕಪಿಲಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ನಂಜನಗೂಡು ತಾಲ್ಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರು ಸ್ನಾನಕ್ಕೆ ತೆರಳಬಾರದು. ಭಕ್ತರಿಗೆ ಸ್ನಾನ ಮಾಡಲು ದೇವಾಲಯದ ಆಡಳಿತ ಮಂಡಳಿಯಿಂದ ವ್ಯವಸ್ಥೆ ಮಾಡಲಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರು ಮಕ್ಕಳನ್ನು ನದಿ ಬಳಿ ಬಿಡಬಾರದು. ನದಿ ದಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಕಪಿಲಾ ನದಿಗೆ ತೆರಳಬಾರದು ಎಂದು ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ.

