ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪಿಯು ಕಾಲೇಜಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಢೀರ್ ಭೇಟಿ ನೀಡಿದರು.
ಕಳೆದ ನಾಲ್ಕು ದಿನಗಳ ಹಿಂದೆ ವಸತಿ ಶಾಲೆಯ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಮತ್ತು ಪೋಷಕರು ಸಿಡಿದೆದ್ದು ಬೃಹತ್ ಪ್ರತಿಭಟನೆ ನಡೆಸಿದರು. ಇದರ ಪರಿಣಾಮವಾಗಿ ವಸತಿ ಶಾಲೆಯ ಪ್ರಾಂಶುಪಾಲೆ ವಸಂತ ಕುಮಾರಿ, ನಿಲಯ ಪಾಲಕ ಮಹದೇವಪ್ಪ ಅತಿಥಿ ಶಿಕ್ಷಕ ಗುರುಸ್ವಾಮಿ ಎಂಬುವರನ್ನು ಅಮಾನತು ಗೊಳಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಒಂದು ಗಂಟೆಗಳ ಮಾತುಕತೆ ನಡೆಸಿ ಮಾಹಿತಿ ಕಲೆ ಹಾಕಿದರು. ನಂತರ ಅಡುಗೆ ಕೋಣೆಗೆ ತೆರಳಿ ಆಹಾರ ಪದಾರ್ಥಗಳು ಮತ್ತು ತರಕಾರಿಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜಿಗೆ ಇಂದು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ, ಶೈಕ್ಷಣಿಕ ಸಮಸ್ಯೆಗಳು ಹಾಗೂ ವಸತಿ ಶಾಲೆಯ ಸೌಲಭ್ಯಗಳಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ.
ವಸತಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸೇರಿದಂತೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಅವರಿಗೆ ನೀಡಬೇಕಾದ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ. ಇತ್ತೀಚೆಗೆ ಸದರಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ದೌರ್ಜನ್ಯ, ಜಾತಿ ತಾರತಮ್ಯ, ಊಟದ ಅವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯ ವಿರುದ್ಧ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ವಸತಿ ಶಾಲೆಗೆ ಭೇಟಿ ನೀಡಿದ್ದೆ. ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದೇನೆ. ಜಾತಿ ತಾರತಮ್ಯ ಮಾಡಿರುವ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಪ್ರಾಂಶುಪಾಲ ಹೆಮ್ ಕುಮಾರ್, ಮುಖಂಡರಾದ ರುದ್ರಯ್ಯ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

