ನಂಜನಗೂಡು: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಹಿನ್ನಡೆಯಾಗುತ್ತಿದೆ. ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಆಗಿರುವ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ನಂಜನಗೂಡು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ ಡೆಮೊಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಎಐಡಿಎಸ್ ಓ ಮೈಸೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಧಿಕ್ಕಾರದ ಘೋಷಣೆಗಳನ್ನು ಕೂಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಂತೆ ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.
ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ.
ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತರಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಈ ಕೂಡಲೇ ಪರಿಹರಿಸಬೇಕೆಂದು ಆಗ್ರಹಿಸಿದರು.
ಮನವಿ ಪತ್ರವನ್ನು ಕಾಲೇಜು ಪ್ರಾಂಶುಪಾಲರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ನಿತಿನ್ ,ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಅಭಿಷೇಕ್, ಹಾಗೂ ಕಾಲೇಜಿನ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

