ನಂಜನಗೂಡು: ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಪ್ರಜಾ ಸೇವಾ ಆಂದೋಲನಕ್ಕೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಅಧಿಕಾರಿಗಳು ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.
ಜನರಿಂದ ಸ್ವೀಕರಿಸುವ ಅರ್ಜಿಗಳನ್ನು ನಿರ್ಲಕ್ಷ್ಯ ಮಾಡದೆ, ಕಾಲಮಿತಿಯೊಳಗೆ ಪರಿಹರಿಸಬೇಕು. ಒಂದನೇ ಶನಿವಾರ ಸಲ್ಲಿಸುವ ಅರ್ಜಿಗಳಿಗೆ ಮೂರನೇ ಶನಿವಾರದೊಳಗೆ ಉತ್ತರ ನೀಡಬೇಕು. ಪರಿಹಾರ ನೀಡಲು ಸಾಧ್ಯವಾಗದಿದ್ದರೆ ಅದಕ್ಕೆ ನಿಖರವಾದ ಕಾರಣವನ್ನು ಅರ್ಜಿದಾರರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಬುಧವಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅರ್ಜಿಗಳ ಪರಿಶೀಲನೆ ನಡೆಯಲಿದ್ದು, ಪ್ರತಿ ಶುಕ್ರವಾರ ಅರ್ಜಿಗಳ ಪರಿಶೀಲನೆ ನಡೆಸಿ ಆದೇಶ ಹೊರಡಿಸಲಾಗುವುದು. ಶಾಲಾ-ಕಾಲೇಜುಗಳು ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡುವ ಸಾಧ್ಯತೆಯೂ ಇದೆ ಎಂದು ತಿಳಿಸಿದರು.
ಜನರ ಕಷ್ಟಗಳನ್ನು ಆಲಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದ್ದು, ಪ್ರಜಾ ಸೇವಾ ಆಂದೋಲನದ ಉದ್ದೇಶವನ್ನು ಅಧಿಕಾರಿಗಳು ಜನರಿಗೆ ತಿಳಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕು ಎಂದರು.
ತಾಲ್ಲೂಕಿನಲ್ಲಿ ಪ್ರತಿ ಸೋಮವಾರ ನಿರಂತರವಾಗಿ ಜನಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದ್ದು, ಅಧಿಕಾರಿಗಳು ಮುಕ್ತವಾಗಿ ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಬೇಕು. ಜನತಾದರ್ಶನದ ಜೊತೆ ಜೊತೆಗೆ ಪ್ರಜಾ ಸೇವಾ ಆಂದೋಲನದ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಜಾ ಸೇವಾ ಆಂದೋಲನದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರವನ್ನು ಆಯೋಜಿಸಲಾಗುತ್ತದೆ. ಅಲ್ಲದೆ ಗ್ರಾಮ ವಾಸ್ತವ್ಯವನ್ನು ಮುಂಬರುವ ದಿನಗಳಲ್ಲಿ ಮಾಡಲಾಗುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಕಾರ್ಯಕ್ರಮದಲ್ಲಿ ರೈತನಿಂದ ದೀಪ ಬೆಳಗಿಸುವ ಮೂಲಕ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು. ಬಳಿಕ ಸ್ಥಳದಲ್ಲಿಯೇ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚಿಸಿದರು.
ತಹಶೀಲ್ದಾರ್ ಡಾ. ಸ್ಮಿತಾ ರಾಮು ಮಾತನಾಡಿ, ರಾಜ್ಯಾದ್ಯಂತ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ ನೀಡಲಾಗುತ್ತಿದ್ದು, ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬ ಪ್ರಜೆಗೂ ತಲುಪಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಪ್ರತಿ ಶನಿವಾರ ಹಾಗೂ ಮೂರನೇ ಶನಿವಾರ ತಾಲ್ಲೂಕು, ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ನಡೆಸಬೇಕು. ಅಧಿಕಾರಿಗಳು ಗ್ರಾಮೀಣ ಭಾಗದ ಮೂಲೆಮೂಲೆಗಳಿಗೆ ತೆರಳಿ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಎಂದು ಹೇಳಿದರು.
ಸ್ವೀಕರಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ. ಗ್ರಾಮಗಳು ಹಾಗೂ ಶಾಲೆಗಳಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನು ಆಲಿಸುವ ನಿರೀಕ್ಷೆಯಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಡಾ. ಸ್ಮಿತಾ ರಾಮು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ಬಸವರಾಜು ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
22 ಅರ್ಜಿಗಳ ಸ್ವೀಕಾರ; ಜೆರಾಲ್ಡ್ ರಾಜೇಶ್: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಮಾತನಾಡಿ, ಎಲ್ಲಾ ಇಲಾಖೆಗಳ ಕುಂದುಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನ ನಡೆಸಲಾಗುತ್ತಿದೆ. ನಂಜನಗೂಡಿನಲ್ಲಿ ನಡೆದ ಮೊದಲ ಸಭೆಯಲ್ಲಿ 22 ಅರ್ಜಿಗಳು ಸ್ವೀಕರಿಸಲಾಗಿದೆ.
ಪ್ರತಿ ಶನಿವಾರ ಹಾಗೂ ಮೂರನೇ ಶನಿವಾರ ಯಾವುದೇ ಸಭೆ, ಸಮಾರಂಭಗಳನ್ನು ಆಯೋಜಿಸದೆ ಪ್ರಜಾ ಸೇವಾ ಆಂದೋಲನಕ್ಕೆ ಮೀಸಲಿಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

