ನಂಜನಗೂಡು: ಜೂ.21 ರಂದು ನಂಜನಗೂಡಿನಲ್ಲಿ ವೀರಾಂಜನೇಯ ಧರ್ಮ ಜಾಗೃತಿ ಬಳಗ ನಂಜನಗೂಡು ಇವರ ವತಿಯಿಂದ ಹನುಮ ಜಯಂತಿಯನ್ನು ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣದ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ರವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿ, ನಂಜನಗೂಡು ಪವಿತ್ರ ಸ್ಥಳವಾಗಿದೆ. ಕಳೆದ ಬಾರಿ ಹನುಮ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಹೆಚ್ಚು ಜನರು ಸೇರುತ್ತಿರುವುದರಿಂದ ಪೊಲೀಸ್ ಇಲಾಖೆಗೆ ಜವಾಬ್ದಾರಿ ಇದೆ. ಮಧ್ಯಾಹ್ನ 12 ಗಂಟೆಗೆ ಮೆರವಣಿಗೆಯನ್ನು ಪ್ರಾರಂಭ ಮಾಡಿ ಸಂಜೆ ಆರು ಗಂಟೆಯ ಒಳಗೆ ಮುಗಿಸಬೇಕು. ಬಂಟಿಂಗ್ಸ್, ಪ್ಲೆಕ್ಸ್ ಗಳನ್ನು ಅಳವಡಿಸಿ ಕಾರ್ಯಕ್ರಮ ಮುಗಿದ ಒಂದು ಗಂಟೆಯ ಒಳಗೆ ತೆರವುಗೊಳಿಸಬೇಕು.

ಪ್ಲೆಕ್ಸ್ ಗಳಿಂದ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ನಮ್ಮ ಆಚರಣೆ ಬೇರೆ ಯಾರಿಗೂ ಕೂಡ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಹನುಮ ಜಯಂತಿಯನ್ನು ಆಚರಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಆಚರಣೆ ಮಾಡಬೇಕಾಗಿದೆ ಎಲ್ಲರೂ ಪೊಲೀಸರೊಂದಿಗೆ ಸಹಕಾರ ನೀಡಬೇಕು. ಹನುಮ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ 600 ಪೊಲೀಸರು , 4 ಕೆಎಸ್ಆರ್ ಪಿಸಿ, 4 ಡಿವೈಎಸ್ಪಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಎಎಸ್ಪಿ ನಾಗೇಶ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಡಿವೈಎಸ್ಪಿ ರಘು, ವೃತ್ತ ನಿರೀಕ್ಷಕ ಚಂದ್ರಶೇಖರ್, ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ರವೀಂದ್ರ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಕುಮಾರ್ ಸೇರಿದಂತೆ ಯುವಕರು ಮತ್ತು ಮುಖಂಡರು ಭಾಗವಹಿಸಿದ್ದರು ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮೂರ್ತಿ ಎಂಬಾತನನ್ನು ಬಂಧಿಸಿದ್ದೇವೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂಳಿದ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಬಂಧಿಸಲಾಗುವುದು. ಇನ್ನೂ ಮೈಸೂರಿನ ವಾಜಮಂಗಲ ಗ್ರಾಮದಲ್ಲಿಯೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು.

ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಹೋಗದೆ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಪಟ್ಟಣ ಪ್ರದೇಶಗಳಲ್ಲಿರುವ ಪಾರ್ಕ್ ಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅನವಶ್ಯಕವಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾರ್ವಜನಿಕ ಪ್ರದೇಶಗಳಲ್ಲಿ ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಇದರ ಸಂಪೂರ್ಣ ಜವಾಬ್ದಾರಿಯನ್ನು ಕಾಲೇಜಿನ ಪ್ರಾಂಶುಪಾಲರು ವಹಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತರಗತಿಗಳಿಗೆ ಗೈರು ಆದಲ್ಲಿ ಅವರ ಪೋಷಕರಿಗೆ ಪ್ರಾಂಶುಪಾಲರು ಮತ್ತು ಶಿಕ್ಷಕರು ದೂರವಾಣಿ ಕರೆಯ ಮೂಲಕ ತಿಳಿಸಬೇಕು. ವಿದ್ಯಾರ್ಥಿಗಳು ಓಡಾಡುವ ಕಡೆ ಮತ್ತು ಶಾಲಾ ಕಾಲೇಜುಗಳಿಗೆ ಪೊಲೀಸರನ್ನು ಗಸ್ತು ಹೋಗುವಂತೆ ಈಗಾಗಲೇ ನಂಜನಗೂಡು ಪೊಲೀಸರಿಗೆ ಸೂಚಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದರು.