ನಂಜನಗೂಡು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು.

ದಿ.ಆರ್ ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಸಂತಸ ತಂದಿದೆ. ನಂಜನಗೂಡು ತಾಲ್ಲೂಕಿನಲ್ಲಿ ಅತಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ನಂಜನಗೂಡು ಸಾಕಷ್ಟು ಯುವಕರಿಗೆ ಅವಕಾಶ ಮಾಡಿಕೊಡುತ್ತಿದೆ. ನಮ್ಮ ತಂದೆಯವರು ಕೂಡ ಕ್ರೀಡಾ ಪಟುವಾಗಿದ್ದರು.

ಅವರು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಪ್ರೋತ್ಸಾಹಿಸಿ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ವಕೀಲರಾದ ಉಮೇಶ್, ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಕಾಂಗ್ರೆಸ್ ಮುಖಂಡ ಮಂಜುನಾಥ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕರಳಾಪುರ ವಿಜಯಕುಮಾರ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇಬೂರು ಅಶೋಕ್, ವಾಯುಪುತ್ರ ಡೆವಲಪರ್ಸ್ ಚೆಲುವರಾಜು, ಮಾಜಿ ಗ್ರಾಪಂ ಅಧ್ಯಕ್ಷ ಗಿರೀಶ್, ಹಲ್ಲರೆ ಮಹದೇವ್, ಕಳಲೆ ರಾಜೇಶ್, ರಘು, ಆಯೋಜಕರಾದ ಜಿಮ್ ರಘು, ಪೈಲ್ವಾನ್ ಚೇತನ್, ಪೈಲ್ವಾನ್ ನಟೇಶ್, ಪೈಲ್ವಾನ್ ಶಿವಕುಮಾರ್, ಮಹದೇವ್ ಭರ್ಜರಿ ಸೇರಿದಂತೆ ಕುಸ್ತಿಪಟುಗಳು ಭಾಗವಹಿಸಿದ್ದರು.