ನಂಜನಗೂಡು: ನಂಜನಗೂಡು ತಾಲ್ಲೂಕಿನ ಚಿನ್ನದಗುಡಿಹುಂಡಿ ಗ್ರಾಮದ ಬಳಿ ಹಾದು ಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಬಿನಿ ಬಲದಂಡೆ ನಾಲೆಯಲ್ಲಿ ಹಾಡಹಗಲೇ ರಾಜಾರೋಷವಾಗಿ ಇಲಾಖೆಯ ಅಧಿಕಾರಿಗಳ ಅನುಮತಿ ಪಡೆಯದೆ ಟ್ರ್ಯಾಕ್ಟರ್, ಟಿಪ್ಪರ್ ಗಳು ಹಾಗೂ ಹಿಟಾಚಿ ಬಳಸಿ ರಸ್ತೆ ನಿರ್ಮಾಣಕ್ಕೆ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಕಬಿನಿ ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವುದು ಎಗ್ಗಿಲ್ಲದೆ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಕರ್ನಾಟಕ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಬಸವಟ್ಟಿಗೆ ನಾಗೇಂದ್ರ ಮತ್ತು ತಾಲ್ಲೂಕು ಅಧ್ಯಕ್ಷ ಮುಳ್ಳೂರು ಸ್ವಾಮಿ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅನುಮತಿ ಇಲ್ಲದೆ ಅಕ್ರಮವಾಗಿ ಮಣ್ಣನ್ನು ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಿದ್ದು ವಾಹನಗಳನ್ನು ವಶಕ್ಕೆ ಪಡೆದು ಕವಲಂದೆ ಪೊಲೀಸರಿಗೆ ಅಧಿಕಾರಿಗಳು ಒಪ್ಪಿಸಿದ್ದಾರೆ. ರಾಜಕೀಯ ಮುಖಂಡನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರ ಹೆಸರನ್ನು ಹೇಳಿಕೊಂಡು ರಾಜಾರೋಷವಾಗಿ ಅಕ್ರಮವಾಗಿ ಮಣ್ಣನ್ನು ಸಾಗಣೆ ಮಾಡುತ್ತಿದ್ದಾರೆ.
ಇವರೊಂದಿಗೆ ಅಧಿಕಾರಿಗಳು ಕೂಡ ಶಾಮೀಲಾಗಿ ನಮ್ಮ ಸಂಪತ್ತನ್ನು ನಾಶ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಕರಣವನ್ನು ದಾಖಲು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಕೂಡಲೇ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಎಫ್ಐಆರ್ ದಾಖಲು ಮಾಡಬೇಕು ಎಂದು ಕರ್ನಾಟಕ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಬಸವಟ್ಟಿಗೆ ನಾಗೇಂದ್ರ, ತಾಲ್ಲೂಕು ಅಧ್ಯಕ್ಷ ಮುಳ್ಳೂರು ಸ್ವಾಮಿ ಆಗ್ರಹಿಸಿದ್ದಾರೆ.

