ನಂಜನಗೂಡು: ಮೈಸೂರಿನಲ್ಲಿ ‘ಡ್ರಗ್ಸ್ ಬೇಡ ಬ್ರೋ’ ಅಭಿಯಾನದ ಮೂಲಕ ಯುವಜನರಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪೊಲೀಸ್ ಇಲಾಖೆಗೆ ನಂಜನಗೂಡಿನಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಯ ಬಗ್ಗೆ ಮಾಹಿತಿಯೇ ಇರಲಿಲ್ಲವೇ? ಎಂಬ ಪ್ರಶ್ನೆಯನ್ನು ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಸಿದ್ದರಾಜು ಎತ್ತಿದ್ದಾರೆ.

ನಂಜನಗೂಡಿನ ಬಿಜೆಪಿ ಕಛೇರಿಯಲ್ಲಿ ಮಾತನಾಡಿದ ಅವರು, ನಂಜನಗೂಡಿನ ಬಾಳೆ ತೋಟದ ಮರೆಯಲ್ಲಿ ನಡೆಯುತ್ತಿದ್ದ ಎಂಡಿಎಂಎ ಮಾದಕ ವಸ್ತುಗಳ ಜಾಲವನ್ನು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಯಲಿಗೆಳೆದಿರುವ ಘಟನೆ ಸ್ಥಳೀಯ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದರು. ಇದೀಗ ಕೇರಳ ಪೊಲೀಸರು ನಂಜನಗೂಡಿಗೆ ಬಂದು ಆರೋಪಿಯನ್ನು ಬಂಧಿಸಿದ್ದಾರೆ. ಹಾಗಾದರೆ ಸ್ಥಳೀಯ ಪೊಲೀಸರಿಗೆ ಈ ದಂಧೆಯ ಬಗ್ಗೆ ಮಾಹಿತಿ ಇರಲಿಲ್ಲವೇ? ನಂಜನಗೂಡು ಪೊಲೀಸರು ಏನು ಮಾಡುತ್ತಿದ್ದಾರೆ? ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಪೊಲೀಸರು ಗಂಡ-ಹೆಂಡತಿಯರ ಜಗಳ ಬಗೆಹರಿಸುವುದು, ಆಸ್ತಿ ವಿವಾದ ಹಾಗೂ ಸಂಚಾರ ನಿಯಮ ಉಲ್ಲಂಘನೆಯ ದಂಡ ವಸೂಲಿಯಲ್ಲೇ ಕಾಲ ಕಳೆಯುತ್ತಿದ್ದಾರೆ. ಆದರೆ ಪಟ್ಟಣದಲ್ಲಿ ಗಾಂಜಾ, ಡ್ರಗ್ಸ್ ಮಾರಾಟ ಹಾಗೂ ಸರಣಿ ಕಳ್ಳತನದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸ್ ಇಲಾಖೆಯ ಕೆಲವರೇ ಇಂತಹ ದಂಧೆಗಳಿಗೆ ಬೆಂಬಲ ನೀಡುತ್ತಿರುವ ಶಂಕೆಯೂ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಶಾಸಕ ಬಿ. ಹರ್ಷವರ್ಧನ್ ಅವರ ನೇತೃತ್ವದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಈ ಹಿಂದೆ ‘ಡ್ರಗ್ಸ್ ಮುಕ್ತ ನಂಜನಗೂಡು’ ಅಭಿಯಾನ ನಡೆಸಲಾಗಿತ್ತು. ಆದರೂ ಮಾದಕ ವಸ್ತುಗಳ ಹಾವಳಿಗೆ ಕಡಿವಾಣ ಬಿದ್ದಿಲ್ಲ. ‘ಡ್ರಗ್ಸ್ ಬೇಡ ಬ್ರೋ’ ಎಂಬ ಜಾಗೃತಿ ಅಭಿಯಾನ ಮಾಡುವುದಕ್ಕಿಂತ ಡ್ರಗ್ಸ್ ಮುಕ್ತ ನಂಜನಗೂಡು ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಆದ್ಯತೆ ನೀಡಬೇಕಿತ್ತು ಎಂದು ವ್ಯಂಗ್ಯವಾಡಿದ್ದಾರೆ.

ನಂಜನಗೂಡಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಜನರು ನೆಮ್ಮದಿಯಿಂದ ಬದುಕುವ ಪರಿಸ್ಥಿತಿ ಇಲ್ಲವಾಗಿದೆ. ಕಳೆದ ಐದರಿಂದ ಹತ್ತು ವರ್ಷಗಳಿಂದ ಒಂದೇ ಸ್ಥಳದಲ್ಲಿ ನೆಲೆಯೂರಿರುವ ಪೊಲೀಸರನ್ನು ವರ್ಗಾವಣೆ ಮಾಡದಿರುವುದೇಕೆ? ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಉಳಿಸಿಕೊಂಡು, ಕರ್ತವ್ಯ ಲೋಪ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ದಂಧೆ ನಿಯಂತ್ರಿಸುವಲ್ಲಿ ವಿಫಲರಾದ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನಂಜನಗೂಡಿನಲ್ಲಿ ಡ್ರಗ್ಸ್ ಮತ್ತು ಗಾಂಜಾ ಮಾರಾಟಗಾರರನ್ನು ಬಂಧಿಸಿರುವ ಪ್ರಕರಣಗಳಿದ್ದರೆ ಪೊಲೀಸರು ಬಹಿರಂಗಪಡಿಸಲಿ. ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಸಿದ್ದರಾಜು, ಬಿಜೆಪಿ ನಗರ ಉಪಾಧ್ಯಕ್ಷ ಗೋಪಿನಾಥ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ರವಿ ಹಾಗೂ ಮದನ್ ಉಪಸ್ಥಿತರಿದ್ದರು.