ನಂಜನಗೂಡು: ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸಬೇಕಾದ ಇಂದಿರಾ ಕ್ಯಾಂಟೀನ್ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂಜನಗೂಡಿನ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದ ಶಾಸಕರು, ಅಡುಗೆ ಕೋಣೆ ಹಾಗೂ ಊಟದ ಹಾಲ್ ಪರಿಶೀಲಿಸಿದರು. ಬಳಿಕ ಕ್ಯಾಂಟೀನ್ನಲ್ಲಿ ಊಟ ಸವಿದು, ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ನಿಗದಿತ ಮೆನು ಪ್ರಕಾರ ಆಹಾರ ನೀಡದಿರುವುದನ್ನು ಗಮನಿಸಿ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಕ್ಯಾಂಟೀನ್ನಲ್ಲಿ ಪ್ರತಿದಿನ ಏನೇನು ಅಡುಗೆ ಮಾಡಲಾಗುತ್ತದೆ? ನಿಗದಿತ ಮೆನು ಪ್ರಕಾರ ಉಪಾಹಾರ ಮತ್ತು ಊಟ ನೀಡದಿರಲು ಕಾರಣವೇನು? ಆಹಾರದ ಗುಣಮಟ್ಟವನ್ನು ಕಾಪಾಡುತ್ತಿಲ್ಲವೇಕೆ? ಎಂದು ಸಿಬ್ಬಂದಿಯನ್ನು ಪ್ರಶ್ನಿಸಿದರು.
ಸಾರ್ವಜನಿಕರಿಂದ ಕಳಪೆ ಆಹಾರ ಹಾಗೂ ಕ್ಯಾಂಟೀನ್ ನಿರ್ವಹಣೆ ಕುರಿತು ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಆಹಾರ ನಿರೀಕ್ಷಕರು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ ಶಾಸಕರು, ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.
ಕ್ಯಾಂಟೀನ್ನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರುಚಿಕರವಾದ ಹಾಗೂ ಗುಣಮಟ್ಟದ ಆಹಾರವನ್ನು ತಯಾರಿಸಿ ಸಾರ್ವಜನಿಕರಿಗೆ ವಿತರಿಸಬೇಕು. ಸರ್ಕಾರ ನಿಗದಿಪಡಿಸಿರುವ ಮೆನು ಪ್ರಕಾರವೇ ಉಪಾಹಾರ ಮತ್ತು ಊಟ ನೀಡಬೇಕು ಎಂದು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂದಿರಾ ಕ್ಯಾಂಟೀನ್ನಲ್ಲಿ ಬೆಳಗಿನ ಉಪಾಹಾರಕ್ಕೆ ಐದು ರೂಪಾಯಿ ಹಾಗೂ ಮಧ್ಯಾಹ್ನದ ಊಟಕ್ಕೆ ಹತ್ತು ರೂಪಾಯಿ ನಿಗದಿಪಡಿಸಲಾಗಿದೆ. ಶಾಸಕರು ಹತ್ತು ರೂಪಾಯಿ ಪಾವತಿಸಿ ಊಟ ಮಾಡಿದ್ದು, ಆಹಾರದ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್, ಇಂದಿರಾ ಕ್ಯಾಂಟೀನ್ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ಸರ್ಕಾರದ ಉದ್ದೇಶ. ಆದರೆ, ನಿಗದಿತ ಮೆನು ಪಾಲಿಸದಿರುವುದು ಹಾಗೂ ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಬಂದಿರುವುದು ಗಮನಕ್ಕೆ ಬಂದಿದೆ.
ಈ ಹಿಂದೆ ಅಧಿಕಾರಿಗಳು ಕ್ಯಾಂಟೀನ್ಗೆ ಭೇಟಿ ನೀಡಿ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಬಂದ ನಂತರ ಅದರ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕ್ಯಾಂಟೀನ್ನಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟ ಕಾಪಾಡಬೇಕು ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ತೆರೆದರು. ಇಂದಿರಾ ಕ್ಯಾಂಟೀನ್ ಮೂಲಕ ಬಡವರು, ಕಾರ್ಮಿಕರು ಹಾಗೂ ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುತ್ತಿದೆ. ಈ ಯೋಜನೆಯ ಉದ್ದೇಶ ಈಡೇರಬೇಕಾದರೆ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆಹಾರ ನೀಡುವುದು ಕಡ್ಡಾಯ. ಆದ್ದರಿಂದ ಅಧಿಕಾರಿಗಳು ಪ್ರತಿ ವಾರ ಕ್ಯಾಂಟೀನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸರ್ಕಾರದ ಜನಪರ ಯೋಜನೆಯ ಉದ್ದೇಶಕ್ಕೆ ಧಕ್ಕೆಯಾಗದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಶುಚಿ, ರುಚಿಯಾದ ಹಾಗೂ ಗುಣಮಟ್ಟದ ಆಹಾರ ಒದಗಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಪೌರಯುಕ್ತರಾದ ಬಸವರಾಜ್, ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸವೇಗೌಡ, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಗಾಯತ್ರಿ ಮೋಹನ್, ಮಹೇಶ್, ಗಂಗಾಧರ್, ಯೋಗೀಶ್, ಬಸವರಾಜ್, ರವಿ, ಶ್ರೀಧರ್, ರಮೇಶ್, ಸೇರಿದಂತೆ ಹಲವರು ಹಾಜರಿದ್ದರು.

