ನಂಜನಗೂಡು: ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್, ನೆನ್ನೆ ಮುಂಜಾನೆ ಈ ಘಟನೆಯ ವಿಷಯ ತಿಳಿದ ಕೂಡಲೇ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಿ ಕೃತ್ಯ ಎಸಗಿದ ದೇಶದ್ರೋಹಿಗಳನ್ನು ಕೂಡಲೇ ಪತ್ತೆಹಚ್ಚಿ, ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಿ ಕಠಿಣವಾದ ಶಿಕ್ಷೆ ಆಗಬೇಕು.

ನಾನು ಇವತ್ತು ಶಾಸಕನಾಗಿದ್ದೇನೆ ಎಂದರೆ ಅದಕ್ಕೆ ಬಾಬಾ ಸಾಹೇಬರು ಮತ್ತು ಸಂವಿಧಾನ ಕಾರಣ, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದರು, ಛಲಬಿಡದೆ ಓದಿ ಸಂವಿಧಾನ ಬರೆದು ನಮಗೆಲ್ಲರಿಗೂ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ನೀಡಿದ್ದಾರೆ. ಬಾಬಾ ಸಾಹೇಬರಿಗೆ ಅವಮಾನ ವಾಗಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಡಿವೈಎಸ್ಪಿ ರಘು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.