ನಂಜನಗೂಡು: ವಾಹನ ಸವಾರರೇ ಎಚ್ಚರ, ಎಚ್ಚರ, ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಂಚರಿಸಬೇಕಾದರೆ ಕಡ್ಡಾಯವಾಗಿ ಸಂಚಾರಿ ನಿಯಮಗಳು ಮತ್ತು ಕಾನೂನನ್ನು ಪಾಲಿಸಬೇಕಾಗುತ್ತದೆ. ನಂಜನಗೂಡಿನಲ್ಲಿ ಸಂಚಾರಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಹೌದು, ರಸ್ತೆ ಅಪಘಾತಗಳು ಮತ್ತು ಟ್ರಾಫಿಕ್ ಜಾಮ್ ತಪ್ಪಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತಿದೆ.
ಪೊಲೀಸರ ಕಾರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಸಾಥ್ ನೀಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್ಪಿ ರಘು ರವರ ಮಾರ್ಗದರ್ಶನದಲ್ಲಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿ.ಎಂ ರವೀಂದ್ರ, ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಹೆಚ್.ಕೆ ಕೃಷ್ಣಕಾಂತ ಕೋಳಿ ನೇತೃತ್ವದಲ್ಲಿ ವಾಹನ ಸವಾರರಿಗೆ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಲಾಗುತ್ತಿದೆ.

ನಗರದ ಆರ್ ಪಿ ರಸ್ತೆ, ಎಂಜಿ ರಸ್ತೆ, ಬಜಾರ್ ರಸ್ತೆ, ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ನಂಜನಗೂಡು ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡಲಾಗುತ್ತಿದೆ. ಸಂಚಾರಿ ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳು ಬೀದಿಗಿಳಿದಿದ್ದಾರೆ.
ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿದರೆ ವಾಹನದ ಚಕ್ರಕ್ಕೆ ಲಾಕ್ ಬೀಳುತ್ತದೆ. ಹಾಗೆ ವಾಹನವನ್ನು ವಶಕ್ಕೆ ಪಡೆದು ದಾಖಲಾತಿಗಳನ್ನು ಪರಿಶೀಲಿಸಿ ದಂಡವನ್ನು ಕಟ್ಟಿಸುವುದಲ್ಲದೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ. ಪಟ್ಟಣದ ವೃತ್ತಗಳು ಮತ್ತು ಅಪಘಾತಗಳ ಸ್ಥಳಗಳು, ಪಾರ್ಕಿಂಗ್ ಸ್ಥಳಗಳು ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳು ಮತ್ತು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಮುಂದಾಗಿದ್ದಾರೆ.
ವಾಹನ ಸವಾರರ ಚಾಲನೆಯ ಮಿತಿಮೀರಿದ ವೇಗ, ಕುಡಿದು ವಾಹನ ಚಾಲನೆ ಮಾಡುತ್ತಿದ್ದಾರೆ. ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದಾರೆ. ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿದ್ದಾರೆ. ಈ ಬಗ್ಗೆಯೂ ಸಂಚಾರಿ ಪೊಲೀಸರು ಸ್ಥಳದಲ್ಲಿಯೇ ಜಾಗೃತಿ ಮೂಡಿಸುತ್ತಿದ್ದಾರೆ. ಸಂಚಾರಿ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

