ಮೈಸೂರು: ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ವಿವಿಧ ಯೋಜನೆಗಳಾದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮ-2005, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ, ರಕ್ಷಣೆ ಮತ್ತು ಪುನರ್ವಸತಿ, ಉದ್ಯೋಗಸ್ಥ ಮಹಿಳೆಯರ ವಸತಿನಿಲಯಗಳ ಕಾರ್ಯನಿರ್ವಹಣೆ, ಕೇಂದ್ರ ಪುರಸ್ಕೃತ ಮಿಷನ್ ಶಕ್ತಿ ಯೋಜನೆ ಅನುಷ್ಠಾನ, ಸಾಂತ್ವನ ಯೋಜನೆ ಹಾಗೂ ಸ್ತ್ರೀಶಕ್ತಿ ಯೋಜನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಂಗನವಾಡಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಡಿಸೆಂಬರ್ 3ನೇ ವಾರದೊಳಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಅಭ್ಯರ್ಥಿಗೆ ಯಾವುದೇ ರೀತಿಯ ಅಕ್ರಮ ಆಗದಂತೆ ನೋಡಿಕೊಂಡು ಅರ್ಹರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಹಿಳೆಯರಿಗಾಗಿ ಕೆಲಸ ನಿರ್ವಹಿಸುತ್ತಿರುವ ೮ ಸಾಂತ್ವನ ಕೇಂದ್ರಗಳಿದ್ದು, ಇಲ್ಲಿ ಲೈಂಗಿಕ ಕಿರುಕುಳ, ಕೌಟುಂಬಿಕ ಕಿರುಕುಳ ಹಾಗೂ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವ ಮಹಿಳೆಯರಿಗೆ ಕೌನ್ಸಿಲಿಂಗ್ ಮೂಲಕ ಪರಿಹಾರ ನೀಡುವುದು ಹಾಗೂ ಆಶ್ರಯ ನೀಡಿ ಸಂತೈಸಲಾಗುತ್ತಿದ್ದು, ಇದರಿಂದ ಜಿಲ್ಲೆಯ ಹಲವಾರು ಹೆಣ್ಣು ಮಕ್ಕಳು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾಗಿ ಈ ರೀತಿಯ ಸಂಸ್ಥೆಗಳು ಇನ್ನೂ ಹೆಚ್ಚಿನ ಕಾರ್ಯ ನಿರ್ವಹಿಸಲು ಮುಂದಾಗಬೇಕು ಎಂದು ಹೇಳಿದರು.
ಸರ್ಕಾರೇತರ ಸಂಸ್ಥೆಗಳು ಪ್ರಾರಂಭಿಸಿರುವ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಲ್ಲಿ ತಮ್ಮಲಿರುವ ಅನುದಾನದ ಮಟ್ಟದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲು ಮುಂದಾಗಿ ಮಹಿಳೆಯರಿಗೆ ಅನುಕೂಲವಾಗುವಂತೆ ಮಾಡಬೇಕು. ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಗಳು ಕಂಡುಬಂದರೆ ಅದರ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಸಾಗಾಣಿಕೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ.ಪಿ.ಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಗಳು ಉಪಸ್ಥಿತರಿದ್ದರು.

