ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕರೆ ನೀಡಿದ್ದ ‘ನಿರುದ್ಯೋಗ ದಿನ’ ಆಚರಣೆಯ ಅಂಗವಾಗಿ ಮೈಸೂರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಶ್ರೀರಾಂಪುರ ಸಿಗ್ನಲ್‌ ಬಳಿಯ ಹೆಚ್.ಡಿ. ಕೋಟೆ ರಸ್ತೆಯಲ್ಲಿ ನಡೆದ ಪ್ರತಿಭಟನೆಯನ್ನು ಮೈಸೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ ನೇತೃತ್ವ ವಹಿಸಿದ್ದರು. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಈ ವೇಳೆ ಪಕೋಡಾ ತಯಾರಿಸಿ ಸಾರ್ವಜನಿಕರಿಗೆ ಹಂಚುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಚಂದನ್ ಗೌಡ, ಪ್ರತಿವರ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಲಾಗುತ್ತಿದ್ದರೂ, ಉದ್ಯೋಗ ಸೃಷ್ಟಿಯ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಯುವಕರಿಗೆ ಎಷ್ಟು ಉದ್ಯೋಗ ನೀಡಲಾಗಿದೆ ಎಂಬುದರ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ಅಂಕಿ-ಅಂಶ ನೀಡಬೇಕು ಎಂದು ಆಗ್ರಹಿಸಿದರು.

“ಯುವಕರಿಗೆ ಉದ್ಯೋಗ ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಉದ್ಯೋಗ ನೀಡಲು ಸಾಧ್ಯವಾಗದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು. ಯುವಕರಿಗೆ ಉದ್ಯೋಗ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ” ಎಂದು ಚಂದನ್ ಗೌಡ ಹೇಳಿದರು.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ದೇಶದಲ್ಲಿ ದೊಡ್ಡ ಪ್ರಮಾಣದ ಮೂಲಸೌಕರ್ಯ ಕಾಮಗಾರಿಗಳು ನಡೆಯುತ್ತಿದ್ದರೂ, ಅವುಗಳಿಂದ ಯುವಕರಿಗೆ ಎಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂಬುದನ್ನು ಕೇಂದ್ರ ಸರ್ಕಾರ ತಿಳಿಸಬೇಕು ಎಂದು ಒತ್ತಾಯಿಸಿದರು.

ಯುವಕರ ಉದ್ಯೋಗದ ವಿಚಾರದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಾಂಕೇತಿಕವಾಗಿ ‘ನಿರುದ್ಯೋಗ ದಿನ’ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯುವಕರ ಪರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಂ. ಲಕ್ಷ್ಮಣ್ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳು, ವಿವಿಧ ವಿಧಾನಸಭಾ ಕ್ಷೇತ್ರಗಳ ಹಾಗೂ ಬ್ಲಾಕ್ ಘಟಕಗಳ ಮುಖಂಡರು, ಮಾಧ್ಯಮ ವಿಭಾಗ ಮತ್ತು ಲೀಗಲ್ ಸೆಲ್‌ನ ಪದಾಧಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.