ನಂಜನಗೂಡು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕಾರ್ಯಾಗಾರಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಾಗಾರವನ್ನು ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಿ.ಬಸವರಾಜು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗಾಗಿ ದಲಿತ ಸಂಘರ್ಷ ಸಮಿತಿಯಿಂದ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಶೇ.300 ಮಕ್ಕಳು ಗಣಿತ, ವಿಜ್ಞಾನ ವಿಷಯಗಳಲ್ಲಿ ಅನುತ್ತೀರ್ಣ ಆಗುತ್ತಿದ್ದಾರೆ. ಇದರಿಂದ ತಾಲ್ಲೂಕಿನಲ್ಲಿ ಫಲಿತಾಂಶ ಕಡಿಮೆ ಬರುತ್ತಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಪ್ರತಿ ಹೋಬಳಿ ಮಟ್ಟದಲ್ಲಿಯೂ ದಲಿತ ಸಂಘರ್ಷ ಸಮಿತಿಯಿಂದ ಕಾರ್ಯಗಾರವನ್ನು ಆಯೋಜನೆ ಮಾಡಲಾಗಿದೆ. ದಸಂಸ ಜಿಲ್ಲಾ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್, ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ದೊಡ್ಡಕವಲಂದೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ದೇವನೂರು, ಬದನವಾಳು, ಹೆಮ್ಮರಗಾಲ ಮತ್ತು ಕವಲಂದೆ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.