ಮೈಸೂರು: ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ, ಅಂದು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ಇಲ್ಲಿ ನೆಲೆಸಿದ್ದರು ಎಂಬ ನೆನಪಿಗಾಗಿ ಸ್ಮಾರಕ (ವಿವೇಕಾನಂದ ಸ್ಮಾರಕ) ಹಾಗೂ ಯುವ ಜನರಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರವನ್ನ ನಿರ್ಮಿಸಲಾಗಿತ್ತು, ಪ್ರಧಾನಿಗಳು ಉದ್ಘಾಟಿಸಲಿದ್ದಾರೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ (ಶ್ರೀ ರಾಮಕೃಷ್ಣ ಆಶ್ರಮ) ಮುಕ್ತಿದಾನಂದ ಜೀ ಮಹಾರಾಜ್ ಹೇಳಿದರು.
ಸ್ಮಾರಕ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಅವರು ನಗರದಲ್ಲಿರುವ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಆಶ್ರಮದ ಆಡಿಟೋರಿಯಂನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಸುಮಾರು 30 ನಿಮಿಷಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 6,000 ಮಂದಿ ಬರುವ ನಿರೀಕ್ಷೆಯಿದೆ. ಇದಕ್ಕಾಗಿ ವಿಶೇಷ ಪಾಸ್ ಕೂಡ ಇರಲಿದೆ. ಪಾಸ್ ಇದ್ದವರಿಗಷ್ಟೇ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶವಿದೆ ಎಂದು ಅವರು ವಿವರಿಸಿದ್ದಾರೆ.
ಈ ಕಾರ್ಯಕ್ರಮದ ವೇಳೆ ಶ್ರೀರಾಮ ಮೂರ್ತಿ ನಿರ್ಮಿಸಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನ ಪ್ರಧಾನಿಗಳಿಗೆ ಸ್ಮರಣಿಕೆಯಾಗಿ. ಜೊತೆಗೆ ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನ ಪ್ರತಿಬಿಂಬಿಸುವ ವಿಶೇಷ ಉಡುಗೊರೆಗಳನ್ನು ಪ್ರಧಾನಿಗೆ ಅರ್ಪಿಸಲು ಬಯಸುವುದಿಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಪ್ರಧಾನಿ ಮೋದಿಯವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಹರೀಶ್ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಉಪಸ್ಥಿತರಿರಲಿದ್ದಾರೆ.

