ನಂಜನಗೂಡು: ರಾಜ್ಯ ಸಭೆ ಸದನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ನಂಜನಗೂಡು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹೆದ್ದಾರಿ ತಡೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ದಿಕ್ಕಾರದ ಘೋಷಣೆಗಳನ್ನು ಕೂಗಿ, ರಾಷ್ಟ್ರೀಯ ಹೆದ್ದಾರಿ ತಡೆದು ಅಮಿತ್ ಶಾ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ ತಹಸಿಲ್ದಾರ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಕೆಲವು ಗಂಟೆಗಳ ಕಾಲ ಕಿಲೋ ಮೀಟರ್ ದೂರದ ತನಕ ಟ್ರಾಫಿಕ್ ಜಾಮ್ ಕಂಡು ಬಂತು.