ನಂಜನಗೂಡು: ಗ್ರಾಮೀಣ ಅಭಿವೃದ್ಧಿ ಕೇಂದ್ರವನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟದಲ್ಲಿ 40 ಕೋಟಿ ರೂ. ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ರವರ ನೇತೃತ್ವದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಅಭಿವೃದ್ಧಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ. ಬದನವಾಳು ಗ್ರಾಮಕ್ಕೆ 1927 ರಲ್ಲಿ ಗಾಂಧೀಜಿಯವರು ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದರು. ನೆನಪಿಗಾಗಿ ಶತಮಾನೋತ್ಸವ ಭವನ ಮತ್ತು ಗ್ರಾಮೀಣ ಅಭಿವೃದ್ಧಿ ಕೇಂದ್ರವನ್ನು ಅಭಿವೃದ್ಧಿ ಪಡಿಸಲು ಈ ಹಿಂದೆ ಅಧಿವೇಶನದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಮಾತನಾಡಿ ಸರ್ಕಾರದ ಗಮನವನ್ನು ಸೆಳೆದಿದ್ದರು.
ಇದರಿಂದ ಸರ್ಕಾರ ಅಭಿವೃದ್ಧಿಗೆ ಬಜೆಟ್ ನಲ್ಲೂ ಘೋಷಣೆ ಮಾಡಿತು. ಅಲ್ಲದೆ ಇತ್ತೀಚೆಗೆ ಶ್ರೀ ಮಲೆ ಮಹದೇಶ್ವರಬೆಟ್ಟದಲ್ಲಿ ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡಿರುವ ನಿರ್ಣಯದಂತೆ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಗ್ರಾಮೀಣ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ರೂಪುರೇಷೆಯ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದ್ದಾರೆ.

