ಮೈಸೂರು: ಪಿರಿಯಾಪಟ್ಟಣ ತಾಲ್ಲೂಕಿನ ಬುದಿತಿಟ್ಟು ಕೆಸಗೆ ಗ್ರಾಮದಲ್ಲಿ ಮಂಗಳಮುಖಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಅಮೂಲ್ಯ (19) ಮೃತ ಮಂಗಳಮುಖಿ. ಗ್ರಾಮದ ಜಮೀನೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮೂಲ್ಯ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅಮೂಲ್ಯ ಅವರಿಗೆ ಸಹೋದರರಿಂದ ಕಿರುಕುಳ ನೀಡಲಾಗುತ್ತಿತ್ತು. ಇದೇ ಕಾರಣಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂಬ ಗಂಭೀರ ಆರೋಪವನ್ನು ಮಂಗಳಮುಖಿಯರು ಮಾಡಿದ್ದಾರೆ. ಅಮೂಲ್ಯ ಸಾವಿನ ಹಿಂದೆ ನಿಖರವಾದ ಕಾರಣವೇನು ಎಂಬುದನ್ನು ಪೊಲೀಸರು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ಕುರಿತು ತನಿಖೆ ಮುಂದುವರಿಸಿದ್ದಾರೆ. ಇತ್ತ ಅಮೂಲ್ಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮಂಗಳಮುಖಿಯರು ಪ್ರತಿಭಟನೆ ನಡೆಸಿದರು.
ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗಿ, ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

