ನಂಜನಗೂಡು: ಶಿಕ್ಷಣವೆಂಬುದು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿಲ್ಲ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಜೀವನದ ಮೌಲ್ಯಗಳು ಹಾಗೂ ಉತ್ತಮ ಸಂಸ್ಕಾರವನ್ನು ಕಲಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ನಗರದ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯಿತಿ ಮೈಸೂರು ಹಾಗೂ ಶಾಲಾ ಶಿಕ್ಷಣ ಇಲಾಖೆ ನಂಜನಗೂಡು ತಾಲ್ಲೂಕು ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ–2026, ಗುರುವಂದನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಸಾವಿತ್ರಿಬಾಯಿ ಫುಲೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಜೀವನದ ಹೆಚ್ಚಿನ ಸಮಯವನ್ನು ಶಿಕ್ಷಕರೊಂದಿಗೆ ಕಳೆಯುತ್ತಾರೆ. ಶಿಕ್ಷಣ ಪಡೆದು ವೈದ್ಯರು ಸಮಾಜದ ಆರೋಗ್ಯ ಕಾಪಾಡುತ್ತಾರೆ, ರೈತರು ಕೃಷಿ ಮಾಡುವ ಮೂಲಕ ಇಡೀ ಸಮಾಜಕ್ಕೆ ಅನ್ನ ನೀಡುತ್ತಾರೆ. ಇಂತಹ ಪ್ರತಿಯೊಂದು ಕ್ಷೇತ್ರದಲ್ಲೂ ಶಿಕ್ಷಕರ ಕೊಡುಗೆ ಪ್ರಮುಖವಾಗಿದೆ. ಆದ್ದರಿಂದ ಶಿಕ್ಷಕರನ್ನು ಸದಾ ಗೌರವದಿಂದ ಸ್ಮರಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಮುಖ್ಯ ಭಾಷಣಕಾರ ರಮೇಶ್ ಮಾತನಾಡಿ, ಎಐ ತಂತ್ರಜ್ಞಾನದ ಪ್ರಭಾವ ಹೆಚ್ಚುತ್ತಿರುವ ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಮತ್ತು ಗುಣಾತ್ಮಕ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಕ್ಷರದ ಜ್ಞಾನವನ್ನು ಬಿತ್ತಿ, ಅವರ ಮೂಲಕ ಉತ್ತಮ ಸಮಾಜ ನಿರ್ಮಾಣವಾಗುವಂತೆ ಮಾಡುತ್ತಿದ್ದಾರೆ. ಶಿಕ್ಷಕರು ಅತ್ಯಂತ ಜವಾಬ್ದಾರಿಯುತ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಿ ಗೌರವಿಸಲಾಯಿತು. ಅಲ್ಲದೆ, ತಾಲ್ಲೂಕಿನ ವಿವಿಧ ಶಾಲೆಗಳ ಉತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಮಹೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಡಿ. ಬಸವರಾಜು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ದೀಪು, ದೈಹಿಕ ಶಿಕ್ಷಣ ಪರಿವೀಕ್ಷಕಿ ಪುಷ್ಪ, ಕಾರ್ಯದರ್ಶಿ ಮಹೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಂಗನಾಥ್,
ಪ್ರಧಾನ ಕಾರ್ಯದರ್ಶಿ ಕಲ್ಪನಾ, ಗೌರವಾಧ್ಯಕ್ಷ ಧರ್ಮ ರತ್ನಾಕರ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಾಲರಾಜು, ಕಾರ್ಯದರ್ಶಿ ರೇಚಣ್ಣ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಕಾರಯ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನೀಲಿಸಿದ್ದು, ಕಾರ್ಯದರ್ಶಿ ಶ್ರೀಪತಿ ಸೇರಿದಂತೆ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

