ನಂಜನಗೂಡು: ತಾಲ್ಲೂಕಿನ ದೇಬೂರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿನ ಮೂಲಸೌಕರ್ಯಗಳ ಕೊರತೆ ಹಾಗೂ ಆಡಳಿತಾತ್ಮಕ ಅವ್ಯವಸ್ಥೆ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದ್ದು, ಪ್ರಾಂಶುಪಾಲ ಕೆಂಡಗಣ್ಣ ಸ್ವಾಮಿ ಅವರನ್ನು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯನ್ನು ರಚಿಸದೇ ವಿದ್ಯಾರ್ಥಿಗಳಿಂದ ₹800 ಶುಲ್ಕ ವಸೂಲಿ ಮಾಡಲಾಗಿತ್ತು ಎಂಬ ಆರೋಪ ಸೇರಿದಂತೆ ಹಲವು ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ವಿದ್ಯಾರ್ಥಿಗಳಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು, ಶೌಚಾಲಯಗಳ ಅಸ್ವಚ್ಛತೆ, ಗ್ರಂಥಾಲಯದ ಕೊರತೆ, ವಿಜ್ಞಾನ ಪ್ರಯೋಗಾಲಯದಲ್ಲಿ ಅಗತ್ಯ ಸೌಲಭ್ಯಗಳಿಲ್ಲದಿರುವುದು ಸೇರಿದಂತೆ ಸಾಲು ಸಾಲು ಸಮಸ್ಯೆಗಳಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದರು.

ಈ ಕುರಿತು ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ನಿರಂತರವಾಗಿ ವರದಿಗಳು ಪ್ರಕಟಗೊಂಡ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ನಾಗಮ್ಮ ಅವರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ನ್ಯೂಸ್ ಕರ್ನಾಟಕ ವರದಿ ಬಳಿಕ ಕಾಲೇಜಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು, ಶೌಚಾಲಯವನ್ನೂ ಸರಿಪಡಿಸಲಾಗಿದೆ. ಆದರೆ, ಪ್ರಾಂಶುಪಾಲರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. “ನಾವು ಕಳೆದ ಎರಡು ವರ್ಷಗಳಿಂದ ಇದೇ ಸಮಸ್ಯೆಗಳನ್ನು ಅನುಭವಿಸುತ್ತಿದ್ದೇವೆ. ಸುದ್ದಿ ಪ್ರಸಾರವಾದ ಬಳಿಕ ಕೆಲವು ಮೂಲಭೂತ ಸಮಸ್ಯೆಗಳನ್ನು ಮಾತ್ರ ಪರಿಹರಿಸಲಾಗಿದೆ. ಆದರೆ ಇದೇ ಪ್ರಾಂಶುಪಾಲರು ಮುಂದುವರಿದರೆ ಮತ್ತೆ ಹಿಂದಿನ ಪರಿಸ್ಥಿತಿಯೇ ನಿರ್ಮಾಣವಾಗುವ ಸಾಧ್ಯತೆ ಇದೆ” ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಶೈಕ್ಷಣಿಕ ವಾತಾವರಣ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಾಂಶುಪಾಲ ಕೆಂಡಗಣ್ಣ ಸ್ವಾಮಿ ಅವರನ್ನು ತಕ್ಷಣವೇ ಬೇರೆಡೆಗೆ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಬೇರೆ ಪ್ರಾಂಶುಪಾಲರನ್ನು ಶೀಘ್ರವೇ ನೇಮಕ ಮಾಡಬೇಕು ಎಂದು ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಜೊತೆಗೆ ಕಾಲೇಜಿನ ಆಡಳಿತ ಮತ್ತು ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಿಸಲು ಶಿಕ್ಷಣ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

-ಸಿ.ಎಂ ಸುಗಂಧರಾಜು ನ್ಯೂಸ್ ಕರ್ನಾಟಕ ಮೈಸೂರು.