ನಂಜನಗೂಡು: ಬೈಕ್ ನಲ್ಲಿ ತೆರಳುತ್ತಿದ್ದ ಸವಾರನಿಗೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ 70 ಮೃತ ದುರ್ದೈವಿ. ಸಿಂಧುವಳ್ಳಿ ಗ್ರಾಮದಿಂದ ನಂಜನಗೂಡು ಪಟ್ಟಣಕ್ಕೆ ತನ್ನ ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಬರುತ್ತಿದ್ದ ವೇಳೆ ನಂಜನಗೂಡಿನ ಬಸವೇಶ್ವರ ವೃತ್ತದ ಬಳಿ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಕಾಲಿನ ಮೇಲೆ ಚಕ್ರ ಹರಿದಿದೆ. ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಸವಾರ ಮಹೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ .

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು, ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರಿಗೆ ಬಸ್ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.