ನಂಜನಗೂಡು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಂಜನಗೂಡಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆರವಣಿಗೆಗೆ ಚಾಲನೆ ನೀಡಿದರು. ಜೂನಿಯರ್ ಕಾಲೇಜು ಮೈದಾನದಿಂದ ಆರ್.ಪಿ. ರಸ್ತೆಯ ಮೂಲಕ ವಾಲ್ಮೀಕಿ ಭವನದವರೆಗೆ ನಡೆದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ, ವೀರ ಮಕ್ಕಳ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರುಗು ತಂದವು.
ನಂತರ ವಾಲ್ಮೀಕಿ ಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾನ್ ಗ್ರಂಥವು ಇಡೀ ವಿಶ್ವಕ್ಕೆ ಆದರ್ಶ ಸಂದೇಶ ನೀಡಿದೆ. ರಾಮಾಯಣದ ತತ್ವ, ಸಿದ್ಧಾಂತ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ಯುವ ಪೀಳಿಗೆಗೆ ರಾಮಾಯಣದ ಮೌಲ್ಯಗಳನ್ನು ಪರಿಚಯಿಸುವ ಕೆಲಸವಾಗಬೇಕು ಎಂದರು.
ವಾಲ್ಮೀಕಿ ಅವರು ಜ್ಞಾನದ ಸಂಕೇತವಾಗಿದ್ದು, ಅವರ ಜೀವನ, ಇತಿಹಾಸ ಹಾಗೂ ಕೊಡುಗೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಪ್ರಬಂಧ, ಚರ್ಚೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳನ್ನು ಬೆಳೆಸಬೇಕು. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಅವರು, ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರದಲ್ಲಿ ನ್ಯಾಯಾಲಯ ತಡೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.
ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಮಂಡ್ಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕಿ ಭಾರತಿ ಮಹೇಶ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಜೀವನವು ಪರಿವರ್ತನೆ, ಜ್ಞಾನ ಮತ್ತು ಸಾಧನೆಗೆ ಪ್ರೇರಣೆಯಾಗಿದೆ. ಅವರು ರಚಿಸಿದ ರಾಮಾಯಣವು ಕೇವಲ ಮಹಾಕಾವ್ಯವಲ್ಲ; ಅದು ಮಾನವೀಯ ಸಂಬಂಧಗಳು, ಕರ್ತವ್ಯಪ್ರಜ್ಞೆ, ತ್ಯಾಗ, ಪ್ರೀತಿ, ಸಮಾನತೆ ಹಾಗೂ ನೈತಿಕ ಮೌಲ್ಯಗಳನ್ನು ಸಾರುವ ಮಹಾನ್ ಗ್ರಂಥವಾಗಿದೆ. ರಾಮಾಯಣದ ಪಾತ್ರಗಳು ಮತ್ತು ಅವುಗಳ ಜೀವನ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾಜದಲ್ಲಿ ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಲು ಪ್ರೇರಣೆ ನೀಡುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಮಾಜಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಸಿ. ಬಸವರಾಜು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಚಿಕ್ಕರಂಗನಾಯಕ, ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸುಬ್ಬಣ್ಣ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಾರುತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಡಿವೈಎಸ್ಪಿ ಧರ್ಮೇಂದ್ರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಪೌರಾಯುಕ್ತ ಬಸವರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಕುಮಾರ್, ತಾಲೂಕು ನಾಯಕರ ಸಂಘದ ಅಧ್ಯಕ್ಷ ನಾಗರಾಜ್, ಮುಖಂಡರಾದ ದೊರೆಸ್ವಾಮಿ ನಾಯಕ, ಶಿವನಂಜ ನಾಯಕ, ನಗರ್ಲೆ ಸರ್ವೇಶ್, ಗಾಯತ್ರಿ ಸೇರಿದಂತೆ ತಾಲ್ಲೂಕು ನಾಯಕರ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

