ನಂಜನಗೂಡು: ಕುಡಿಯುವ ನೀರು ಪೂರೈಸುವಂತೆ ಮನವಿ ಮಾಡಲು ಬಂದ ಗ್ರಾಮಸ್ಥರೊಂದಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ಪಿಡಿಒ ರಾಜಶೇಖರ್ ಅವರ ವರ್ತನೆಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಡತಲೆ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಬಿಡುವಂತೆ ಮನವಿ ಮಾಡಲು ಪಂಚಾಯಿತಿಗೆ ತೆರಳಿದ್ದ ಸಾರ್ವಜನಿಕರೊಂದಿಗೆ ಪಿಡಿಒ ಅಸಭ್ಯವಾಗಿ ಮಾತನಾಡಿ, ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎನ್ನಲಾಗಿದೆ.

ಕೆಲಸದ ವೇಳೆ ಅಡ್ಡಿಪಡಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಸಾರ್ವಜನಿಕರನ್ನು ಅವಾಚ್ಯ ಪದಗಳಿಂದ ನಿಂದಿಸುವ ಅಧಿಕಾರವನ್ನು ನೀಡಿದವರು ಯಾರು? ಅಧಿಕಾರದ ದರ್ಪಕ್ಕೆ ಕಡಿವಾಣ ಹಾಕಬೇಕಬೇಕಿದೆ. ಸದ್ಯ ಪಿಡಿಒ ಅವಾಚ್ಯ ಶಬ್ದಗಳಿಂದ ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿಡಿಒ ರಾಜಶೇಖರ್ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುವುದರ ಜೊತೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಬಹುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.