ಪ್ಯಾರಿಸ್: ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ ಅವರು 2ನೇ ಬಾರಿಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವರು ಮರು ಆಯ್ಕೆಯಾದ ವಿಚಾರವನ್ನು ಐಒಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಪ್ಯಾರಿಸ್‌ನಲ್ಲಿ ನಡೆಯಲಿರುವ 142ನೇ ಒಲಿಂಪಿಕ್ಸ್ ಅಧಿವೇಶನದಲ್ಲಿ ನೀತಾ ಅಂಬಾನಿ ಶೇ.100ರಷ್ಟು ಮತದಾನದೊಂದಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಐಒಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ನೀತಾ ಅಂಬಾನಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಸಿಕ್ಕ ದೊಡ್ಡ ಗೌರವ ಇದಾಗಿದೆ ಎಂದರು. 2016 ರಲ್ಲಿ ರಿಯೊ ಡಿ ಜನೈರೊ ಒಲಿಂಪಿಕ್ಸ್‌ನಲ್ಲಿ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗೆ ನೀತಾ ಅಂಬಾನಿ ಅವರನ್ನು ಮೊದಲ ಬಾರಿ ಆಯ್ಕೆಯಾಗಿದ್ದರು. ಈ ಮೂಲಕ ಐಒಸಿಗೆ ಸೇರಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡಿದ್ದರು.
‘ಐಒಸಿಯ ಸದಸ್ಯೆಯಾಗಿ ಮರು ಆಯ್ಕೆಯಾಗಿರುವುದು ನನಗೆ ತುಂಬಾ ಖುಷಿ ತಂದಿದೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಚ್ ಮತ್ತು ಐಒಸಿಯ ಸಹ ಸದಸ್ಯರಿಗೆ ನಾನು ಧನ್ಯವಾದ ಹೇಳುತ್ತೇನೆ. ಭಾರತ ಹಾಗೂ ವಿಶ್ವದಾದ್ಯಂತ ಒಲಿಂಪಿಕ್ ಕ್ರೀಡಾಕೂಟವನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ” ಎಂದು ನೀತಾ ಅಂಬಾನಿ ಹೇಳಿದ್ದಾರೆ.

