ನ್ಯೂಲ್ಯಾಂಡ್ಸ್: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯ ಶುರುವಾಗಿದೆ. ಕೇಪ್ ಟೌನ್’ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಈ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಅವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ರವೀಂದ್ರ ಜಡೇಜಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಶಾರ್ದೂಲ್ ಠಾಕೂರ್ ಬದಲಿಗೆ ಯುವ ವೇಗಿ ಮುಕೇಶ್ ಕುಮಾರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿದೆ. ಇದೀಗ ಸರಣಿಯನ್ನು ಡ್ರಾ ನಲ್ಲಿ ಅಂತ್ಯಗೊಳಿಸಬೇಕಿದ್ದರೆ 2ನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲಲೇಬೇಕು.
ಅತ್ತ ಸೌತ್ ಆಫ್ರಿಕಾ ತಂಡವು 2ನೇ ಟೆಸ್ಟ್ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸರಣಿ 1-0 ಅಂತರದಿಂದ ಸರಣಿ ಗೆಲ್ಲಬಹುದು. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.