ಮಂಜೇಶ್ವರ: ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕುಟುಂಬ ಆರೋಗ್ಯ ಕೇಂದ್ರದ ಹೆಲ್ತ್‌ ಇನ್‌ಸ್ಪೆಕ್ಟರ್‌ ಪತ್ತನಂತಿಟ್ಟ ನಿವಾಸಿ ಮನೋಜ್‌ ಕೆ.ವಿ. (45) ಮನೆಯ ಶೌಚಾಲಯದಲ್ಲಿ ಮೃತಪಟ್ಟಿದ್ದಾರೆ.

ಆಸ್ಪತ್ರೆಯ ಅನತಿ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ಏಕಾಂಗಿಯಾಗಿದ್ದ ಅವರು ಜೂ. 18ರಂದು ಆಸ್ಪತ್ರೆಗೆ ಬಾರದ ಕಾರಣ ಸಹೋದ್ಯೋಗಿಗಳು ಫೋನ್‌ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮನೆಗೆ ತೆರಳಿದಾಗ ಒಳಗಿನಿಂದ ಚಿಲಕ ಹಾಕಲಾಗಿತ್ತು. ಒಳಗಿನಿಂದ ದುರ್ನಾತ ಬೀರುತ್ತಿತ್ತು. ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ಶೌಚಾಲಯದಲ್ಲಿ ಮೃತದೇಹ ಪತ್ತೆಯಾಯಿತು. ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ತಲುಪಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಎರಡು ತಿಂಗಳ ಹಿಂದೆಯಷ್ಟೇ ಬದಿಯಡ್ಕದಿಂದ ಮಂಜೇಶ್ವರದ ಕುಟುಂಬ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದರು.