ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಬಸ್ ಚಲಿಸುತ್ತಿದ್ದ ವೇಳೆ ಎಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಚಾಲಕ ಸಮಯಪ್ರಜ್ಞೆ ಪ್ರದರ್ಶಿಸಿ ಬಸ್ ಅನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಸುರಕ್ಷಿತವಾಗಿ ಇಳಿಯಲು ಅವಕಾಶ ಮಾಡಿಕೊಟ್ಟರು.

ಚಾಲಕನ ಬಾಗಿಲು ಮೂಲಕ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ತಕ್ಷಣದ ಕ್ರಮದಿಂದಾಗಿ ಸಂಭವಿಸಬಹುದಾದ ಭಾರಿ ಅವಘಡ ತಪ್ಪಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲವೆಂದು ವರದಿಯಾಗಿದೆ. ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.