ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಜಂಟಿ ಆಶ್ರಯದಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ” ವನ್ನು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ. 13ರ ಶನಿವಾರ ಸಂಜೆ 5:45ಕ್ಕೆ ಆಯೋಜಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ ಎಂದರು.
ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ಡಾ ವಿಎಸ್ ಆಚಾರ್ಯ ಅವರಿಗೆ ಅರ್ಪಿಸಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ- ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ನೃತ್ಯ- ವರ್ಷಧಾರೆ,
ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ- ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ. ಆಳ್ವಾಸ್ ವಿದ್ಯಾರ್ಥಿಗಳಿಂದ ಕಾರ್ಯಕ್ರಮದ ಆರಂಭದಲ್ಲಿ ಸಿಂಗಾರಿ ಮೇಳ ಫ್ಯೂಷನ್ ನಡೆಯಲಿದೆ. ಬೊಂಬೆ ಆಕರ್ಷಕ ಸಿಡಿಮದ್ದಿನ ವಿನೋದಾವಳಿಯೊಂದಿಗೆ ಪ್ರದರ್ಶನವಿರಲಿದೆ. ಪ್ರೇಕ್ಷಕರಿಗಾಗಿ 15000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಗೌರವಧ್ಯಕ್ಷ ವಿ. ಜಿ. ಶೆಟ್ಟಿ, ಉಡುಪಿ ಘಟಕದ ಕಾರ್ಯದರ್ಶಿ ಭುವನ ಪ್ರಸಾದ ಹೆಗ್ಡೆ, ಕಾರ್ಯಕ್ರಮ ಸಂಘಟಕರಾದ ನಿದೀಶ್ ತೋಳಾರ್, ಅಂಬರೀಷ್, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಉದ್ಯಮಿ ಹಾಗೂ ಘಟಕದ ಕಾರ್ಯಕಾರಿಣಿ ಸದಸ್ಯ ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

