ಉಡುಪಿ: ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದ ಅಪರಿಚಿತ ತಂಡವೊಂದು ಉದ್ಯಮಿಯೊಬ್ಬರ ಮನೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ನಡೆದಿದೆ.
ಮನೆ ಮಾಲಕಿ ಮಣೂರು ಗ್ರಾಮದ ಕವಿತಾ ಅವರು ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 25ರಂದು ಬೆಳಿಗ್ಗೆ 8.30ರ ವೇಳೆಗೆ ಇನ್ನೋವಾ, ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತ ತಂಡವು, ಮನೆಯ ಬಾಗಿಲು ಬಡಿದಿತ್ತು. ಆದರೆ ಆಗ ಬಾಗಿಲು ತೆಗೆಯಲಿಲ್ಲ. ಬಳಿಕ 9 ಗಂಟೆಗೆ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ. ಈ ನಡುವೆ ಮನೆಯ ಸಿಸಿಟಿವಿ ಮೇಲೆ ನಿಗಾ ಇಡುತ್ತಿರುವ ಕುಂದಾಪುರದ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ಕೃಷ್ಣ ಅವರು ಕರೆ ಮಾಡಿ, ನಿಮ್ಮ ಮನೆಗೆ ಸ್ಟಿಫ್ಟ್ ಮತ್ತು ಇನೋವಾ ಕಾರಿನಲ್ಲಿ 6-8 ಜನ ಮಂದಿ ಆಗಮಿಸಿ ಗೇಟು ತೆರೆಯಲು ಯತ್ನಿಸಿದ್ದರು. ಸಾಧ್ಯವಾಗದಿದ್ದಾಗ ಕಾಂಪೌಂಡ್ ಹಾರಿ ಮನೆಗೆ ಬಂದು ಬಾಗಿಲು ಹಾಗೂ ಕಿಟಕಿಯನ್ನು ಬಲಾತ್ಕಾರವಾಗಿ ತೆಗೆಯಲು ಪ್ರಯತ್ನಿಸಿರುವುದಾಗಿ ಹಾಗೂ ಗೇಟು ತೆರೆಯದಾಗ ವಾಪಾಸು ಹೋಗಿರುವುದಾಗಿ ತಿಳಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.