ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ರಾಜಮಾತೆ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಅಹಲ್ಯಾ ಬಾಯಿ ಅವರ ಆದರ್ಶ, ಕೊಡುಗೆ ಎಲ್ಲರಿಗೂ ಮಾದರಿ. ಅವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.
ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿಯ ಮಹಿಳಾ ಮೋರ್ಚಾ ಆಡಳಿತ ಪಕ್ಷಕ್ಕೆ ಸೆಡ್ಡು ಹೊಡೆಯುವ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಬೇಕು. ಅನುದಾನ ಹಂಚಿಕೆಯಲ್ಲಿ ಉಡುಪಿ ಜಿಲ್ಲೆಯ ಕಡೆಗಣನೆ, ಸರಕಾರಿ ಬಸ್ ಗಳ ಕಡಿತ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಈ ಮೊದಲಾದ ವಿಚಾರವನ್ನು ಮುಂದಿಟ್ಟುಕೊಂಡು ಮಹಿಳಾ ಮೋರ್ಚಾ ಹೋರಾಟ ಮಾಡಬೇಕು. ಅನ್ಯಾಯಕ್ಕೆ ಒಳಗಾದ ಮಹಿಳೆಯರಿಗೆ ನ್ಯಾಯ ದೊರಕಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಷ್ಟ್ರೀಯ ಸೇವಿಕ ಸಮಿತಿಯ ಬೌಧಿಕ್ ಪ್ರಮುಖ್ ಕುಮುದಿನಿ ಶೆಣೈ ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಯೋತಿ ಉದಯಕುಮಾರ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

