ಉಡುಪಿ: ಕಾಲ್ತುಳಿತ ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಆರ್.ಸಿ.ಬಿ ವಿಜಯೋತ್ಸವವನ್ನು ಯಾವುದೇ ಪೂರ್ವಸಿದ್ಧತೆ ಇಲ್ಲದೆ ಆಯೋಜಿಸಿ, ಪ್ರಚಾರ ಗಿಟ್ಟಿಸಿಕೊಳ್ಳುವ ಕಾಂಗ್ರೆಸ್ ತೆವಲಿನಿಂದಾಗಿ ಕಾಲ್ತುಳಿತ ಉಂಟಾಗಿ 11 ಮಂದಿ ಪ್ರಾಣ ಕಳೆದುಕೊಳ್ಳಬೇಕಾಯಿತು. ಈ ಪ್ರಕರಣಕ್ಕೆ ಪೊಲೀಸರ ತಲೆದಂಡ ಪಡೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರ್.ಸಿ.ಬಿ ಎಂಬ ಖಾಸಗಿ ಸಂಸ್ಥೆಯ ವಿಜಯೋತ್ಸವವನ್ನು ಸರ್ಕಾರಿ ಕಾರ್ಯಕ್ರಮ ಎಂಬಂತೆ ಬಿಂಬಿಸುವ ಕಾರಣ ಏನಿತ್ತು ಎಂದು ಪ್ರಶ್ನಿಸಿದ ಅವರು, ಸರ್ಕಾರದ ಬೇಜವಾಬ್ದಾರಿ ನಡವಳಿಕೆಯನ್ನು ಪೊಲೀಸರ ಮೇಲೆ ಹೇರಲಾಗಿದೆ. ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ದೂರಿದರು.
ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಸರ್ಕಾರ ತನ್ನ ವೈಫಲ್ಯವನ್ನು ಮರೆಮಾಚಲು ಪೊಲೀಸರ ತಲೆದಂಡ ಪಡೆದಿದೆ ಎಂದು ಆರೋಪಿಸಿದರು. ಮಾಜಿ ಶಾಸಕ ಲಾಲಾಜಿ ಮೆಂಡನ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಕುಮಾರ್ ಶೆಟ್ಟಿ ಮೊದಲಾದವರಿದ್ದರು.

